ಹಾಸನ: ಎನ್‌ಸಿಆರ್ ಪ್ರಕರಣವೊಂದನ್ನು ಇತ್ಯರ್ಥಪಡಿಸಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಲಂಚದ ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.

ಎನ್‌ಸಿಆರ್ ಪ್ರಕರಣವನ್ನು ಇತ್ಯರ್ಥಪಡಿಸುವುದಕ್ಕಾಗಿ ನವೀನ್ ಎಂಬುವವರ ಬಳಿ ಪಿಎಸ್‌ಐ ಮಂಜುನಾಥ್ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ ಮೊದಲ ಹಂತವಾಗಿ ₹20 ಸಾವಿರ ನೀಡುವಂತೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.

ಈ ಕುರಿತು ನವೀನ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಹಾಸನದ ಹೋಟೆಲ್‌ವೊಂದರಲ್ಲಿ ₹20 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಪಿಎಸ್‌ಐ ಮಂಜುನಾಥ್ ಅವರನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಶಿಲ್ಪಾ ಹಾಗೂ ಗವಿರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಲಂಚದ ಹಣ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಿದ್ದು, ಲಂಚದ ಬೇಡಿಕೆಯ ಹಿನ್ನೆಲೆ ಹಾಗೂ ಪ್ರಕರಣದ ಸಂಪೂರ್ಣ ವಿವರಗಳನ್ನು ಪರಿಶೀಲಿಸಲಾಗುತ್ತಿದೆ.

Related News

error: Content is protected !!