ಉತ್ತರ ಕನ್ನಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಶುಪಾಲನಾ ಕೇಂದ್ರದಲ್ಲಿ ಗಂಭೀರ ನಿರ್ಲಕ್ಷ್ಯ ನಡೆದಿರುವ ಆರೋಪ ಕೇಳಿಬಂದಿದೆ. ಉದ್ಯೋಗಸ್ಥ ಮಹಿಳೆಯರು ಹಾಗೂ ಯುವತಿಯರಿಗೆ ಅನುಕೂಲವಾಗುವ ಉದ್ದೇಶದಿಂದ ಕಾರ್ಯನಿರ್ವಹಿಸುವ ಈ ಕೇಂದ್ರದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆಯೇ ಇದೀಗ ಪ್ರಶ್ನೆಗಳು ಎದ್ದಿವೆ.
2026ರ ಜುಲೈ 9ರಂದು ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆಗೆ, ಶಿಶುಪಾಲನಾ ಕೇಂದ್ರದಲ್ಲಿದ್ದ ಮೂರು ವರ್ಷದ ಮಗುವೊಂದು ಆಟವಾಡುತ್ತಾ ಕೇಂದ್ರದಿಂದ ಹೊರಬಂದು ವಾಹನಗಳು ಸಂಚರಿಸುವ ರಸ್ತೆಗೆ ತಲುಪಿದೆ ಎನ್ನಲಾಗಿದೆ. ಕೆಲ ಸಮಯದ ಬಳಿಕ ರಸ್ತೆಯ ಮಧ್ಯೆ ಮಗುವನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಧಾವಿಸಿ ಮಗುವನ್ನು ರಕ್ಷಿಸಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.
ಶಿಶುಪಾಲನಾ ಕೇಂದ್ರದಲ್ಲಿ ಮೂವರು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರೂ, ಮಗು ಕೇಂದ್ರದಿಂದ ಹೊರಗೆ ಹೋಗಿರುವುದನ್ನು ಗಮನಿಸದಿರುವುದು ಮಕ್ಕಳ ಸುರಕ್ಷತಾ ವ್ಯವಸ್ಥೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಾರ್ವಜನಿಕರು ಸಮಯಕ್ಕೆ ಸರಿಯಾಗಿ ಮಗುವನ್ನು ಗಮನಿಸದೇ ಇದ್ದಿದ್ದರೆ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆ ಇತ್ತು ಎಂಬ ಆತಂಕ ವ್ಯಕ್ತವಾಗಿದೆ.
ಘಟನೆ ಹಿನ್ನೆಲೆಯಲ್ಲಿ ಕೇಂದ್ರದ ಮೇಲ್ವಿಚಾರಣೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಪದ್ಮಾ ಜಿ. ಅವರ ಆಡಳಿತಾತ್ಮಕ ಮೇಲ್ವಿಚಾರಣೆಯ ಬಗ್ಗೆಯೂ ಪ್ರಶ್ನೆಗಳು ಕೇಳಿಬಂದಿವೆ. ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಶಿಶುಪಾಲನಾ ಕೇಂದ್ರಗಳಲ್ಲಿ ಮಕ್ಕಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.
