ದೇಶದಲ್ಲಿ ಮಹಿಳಾ ಸುರಕ್ಷತೆಗೆ ಸಂಬಂಧಿಸಿದಂತೆ ಎಷ್ಟೇ ಕಠಿಣ ಕಾನೂನು ಕ್ರಮಗಳನ್ನು ಕೈಗೊಂಡರೂ, ಸಾರ್ವಜನಿಕ ಸ್ಥಳಗಳಲ್ಲಿ ಕಿರುಕುಳ ನೀಡುವ ಘಟನೆಗಳು ನಿಲ್ಲುವ ಲಕ್ಷಣ ಕಾಣಿಸುತ್ತಿಲ್ಲ. ಇತ್ತೀಚೆಗೆ ಇದೇ ರೀತಿಯ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ, ಯುವತಿಯೊಬ್ಬಳು ಬೈಕ್‌ನ ಹಿಂದೆ ಕುಳಿತು ರಸ್ತೆಯಲ್ಲಿ ಸಾಗುತ್ತಿರುವುದು ಕಾಣಿಸುತ್ತದೆ. ಈ ವೇಳೆ ಇಬ್ಬರು ಯುವಕರು ಮತ್ತೊಂದು ಬೈಕ್‌ನಲ್ಲಿ ಹಿಂಬದಿಯಿಂದ ಬಂದು, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಮುಂದೆ ಹೋಗಿರುವುದು ದೃಶ್ಯದಲ್ಲಿ ಸ್ಪಷ್ಟವಾಗಿದೆ. ಈ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ ಎಂದು ತಿಳಿದುಬಂದಿದ್ದು, ಕೆಲವೇ ಕ್ಷಣಗಳಲ್ಲಿ ವಿಡಿಯೋ ವ್ಯಾಪಕವಾಗಿ ಹರಡಿದೆ.
ಬೆಳಗಿನ ಸಮಯದಲ್ಲೇ ಇಂತಹ ಘಟನೆ ನಡೆದಿರುವುದರಿಂದ, ಜೈಪುರದಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. “ಹಗಲು ವೇಳೆಯಲ್ಲೇ ಸುರಕ್ಷತೆ ಇಲ್ಲದಿದ್ದರೆ, ರಾತ್ರಿ ಪರಿಸ್ಥಿತಿ ಹೇಗಿರಬಹುದು?” ಎಂದು ಪ್ರಶ್ನಿಸುತ್ತಿದ್ದಾರೆ.
ಈ ವಿಡಿಯೋ ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿದ್ದು, ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ತಕ್ಷಣ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇಂತಹ ಕೃತ್ಯಗಳನ್ನು ತಡೆಯಲು ಕಠಿಣ ಶಿಕ್ಷೆ ಅನಿವಾರ್ಯ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.
