ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಅವರ ಪತ್ನಿ ಸೌಮ್ಯ ಶೆಟ್ಟಿ (28) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿಯಾಗಿದ್ದ ಸುದೀಪ್ ರೈ ಅವರು ಬೆಳ್ತಂಗಡಿಯಲ್ಲಿ ಉದ್ಯಮ ನಡೆಸುತ್ತಿದ್ದರು. ಕಾರ್ಕಳದ ಕಜೆ ನಿವಾಸಿ ಹಾಗೂ ಪುತ್ತೂರು ಸಬ್‌-ರಿಜಿಸ್ಟ್ರಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸೌಮ್ಯ ಶೆಟ್ಟಿಯವರೊಂದಿಗೆ ಫೆಬ್ರವರಿ 17ರಂದು ರಿಜಿಸ್ಟರ್ ಮದುವೆಯಾಗಿದ್ದರು.

ಆದರೆ ಮದುವೆಯಾದ ಕೇವಲ ಒಂದು ತಿಂಗಳಲ್ಲೇ, ಮಾರ್ಚ್ 17ರಂದು ಸುದೀಪ್ ರೈ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 30ರಂದು ಅವರು ಮೃತಪಟ್ಟಿದ್ದರು.

ಮಗನ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಸುದೀಪ್ ಅವರ ತಂದೆ ದಾಮೋದರ ರೈ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು.

ತನಿಖೆ ವೇಳೆ ಲಭ್ಯವಾದ ಪ್ರಾಥಮಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸೌಮ್ಯ ಶೆಟ್ಟಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.

Related News

error: Content is protected !!