ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದ ಯುವಕನೊಬ್ಬ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಮೃತ ಯುವಕ. ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದಾವಣಗೆರೆ ಮೂಲದ ಮಹಿಳೆಯೊಂದಿಗೆ ಆತನಿಗೆ ಪರಿಚಯವಾಗಿತ್ತು. ಆಕೆಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದರೂ, ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿತ್ತು ಎಂದು ತಿಳಿದುಬಂದಿದೆ.
ನಂತರ ಮಹಿಳೆ ತನ್ನ ಪತಿ ಮತ್ತು ಮಕ್ಕಳನ್ನು ಬಿಟ್ಟು ತಿಪ್ಪೇಸ್ವಾಮಿ ಜೊತೆ ಬೆಂಗಳೂರಿಗೆ ಬಂದು ನೆಲೆಸಿದ್ದಳು. ಕಳೆದ ಎರಡು ತಿಂಗಳಿನಿಂದ ಶ್ರೀಗಂಧನಗರದಲ್ಲಿ ಬಾಡಿಗೆ ಮನೆ ಪಡೆದು, ಗಂಡ-ಹೆಂಡತಿ ಎಂದು ಹೇಳಿಕೊಂಡು ಇಬ್ಬರೂ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದರು.
ಆದರೆ ಕೆಲ ದಿನಗಳಿಂದ ಇಬ್ಬರ ನಡುವೆ ಜಗಳಗಳು ಹೆಚ್ಚಾಗಿದ್ದವು ಎನ್ನಲಾಗಿದೆ. ಮಹಿಳೆ ತನ್ನ ಖರ್ಚುಗಳನ್ನು ತಿಪ್ಪೇಸ್ವಾಮಿ ಭರಿಸಲು ಸಾಧ್ಯವಿಲ್ಲ ಎಂದು ಹೇಳಿ, ಆತನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಳು ಎಂದು ಆರೋಪಿಸಲಾಗಿದೆ. ಈ ವಿಚಾರದಿಂದ ಮನನೊಂದ ತಿಪ್ಪೇಸ್ವಾಮಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿಯುತ್ತಿದ್ದಂತೆಯೇ ಮಹಿಳೆ ಸ್ಥಳದಿಂದ ಪರಾರಿಯಾಗಿದ್ದಾಳೆ. ಮಗನ ಸಾವಿಗೆ ಮಹಿಳೆಯೇ ಕಾರಣ ಎಂದು ಆರೋಪಿಸಿ ತಿಪ್ಪೇಸ್ವಾಮಿ ಕುಟುಂಬಸ್ಥರು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾದ ಮಹಿಳೆಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಬೆಳೆವ ಸಂಬಂಧಗಳು ಕೆಲವೊಮ್ಮೆ ಜೀವಕ್ಕೂ ಅಪಾಯಕಾರಿಯಾಗಬಹುದು ಎಂಬುದಕ್ಕೆ ಈ ಘಟನೆ ಮತ್ತೊಂದು ಉದಾಹರಣೆಯಾಗಿದೆ.
