ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಸಮೀಪ ಸರಕಾರಿ ಜಾಗದಲ್ಲಿ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಅವರು ಕಳೆದ ಸುಮಾರು 20 ವರ್ಷಗಳಿಂದ “ಪವನ್ ಕ್ಯಾಂಟಿನ್” ಹೆಸರಿನಲ್ಲಿ ಹೋಟೆಲ್ ನಡೆಸುತ್ತಿದ್ದರು ಎನ್ನಲಾಗಿದೆ. ರವಿವಾರ ಕ್ಯಾಂಟಿನ್‌ಗೆ ರಜೆ ಇರುವ ವೇಳೆ, ಅದರೊಳಗೆ ಪ್ರತ್ಯೇಕ ಕೊಠಡಿ ಹಾಗೂ ಶೌಚಾಲಯ ವ್ಯವಸ್ಥೆ ಮಾಡಿಕೊಂಡು ಮಹಿಳೆಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ದೊರೆತ ಖಚಿತ ಮಾಹಿತಿಯ ಆಧಾರದಲ್ಲಿ ಮೇ 10ರಂದು ಸಂಜೆ ಸುಮಾರು 5 ಗಂಟೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದರು. ದಾಳಿ ವೇಳೆ ಕ್ಯಾಂಟಿನ್ ಮಾಲೀಕ ಸುಂದರ್ ಶೆಟ್ಟಿ (55), ನಾವೂರು ನಿವಾಸಿ ಉಸ್ಮಾನ್ (38) ಹಾಗೂ ಕಲ್ಲೇರಿ ನಿವಾಸಿ ಹೈದರ್ (45)ರನ್ನು ಬಂಧಿಸಲಾಯಿತು. ಸ್ಥಳದಲ್ಲಿದ್ದ 29 ವರ್ಷದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ.

ಪೊಲೀಸರು ದಾಳಿ ವೇಳೆ ಮೊಬೈಲ್ ಫೋನ್, ₹5 ಸಾವಿರ ನಗದು ಹಾಗೂ ಗರ್ಭನಿರೋಧಕ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ರವಿ ಬಿ.ಎಸ್ ನೇತೃತ್ವದಲ್ಲಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷಾ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

Related News

error: Content is protected !!