600 ಮನೆಗಳ ನಿರ್ಮಾಣಕ್ಕಾಗಿ ಬಿಡುಗಡೆ ಮಾಡಲಾಗಿದ್ದ 33 ಕೋಟಿ ರೂಪಾಯಿ ಅನುದಾನದಲ್ಲಿ ಭಾರೀ ಅವ್ಯವಹಾರ ನಡೆದಿರುವ ಆರೋಪದ ಹಿನ್ನೆಲೆ, ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸಂಬಂಧಿಸಿದ ಎಂಟು ಕಡೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.

ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸದೇ ಸುಮಾರು 23 ಕೋಟಿ ರೂಪಾಯಿ ದುರ್ಬಳಕೆ ಮಾಡಲಾಗಿದೆ ಎಂಬ ದೂರು ದಾಖಲಾಗಿದ್ದು, ಅದರ ಆಧಾರದ ಮೇಲೆ ಬೆಳಗಾವಿ ಲೋಕಾಯುಕ್ತ ಎಸ್‌ಪಿ ಪ್ರಶನ್ ದೇಸಾಯಿ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಯಿತು.

ಬೆಂಗಳೂರು ನಗರ, ಧಾರವಾಡ, ರಾಮದುರ್ಗ, ವಿಜಯಪುರ, ಹುಬ್ಬಳ್ಳಿ ಸೇರಿದಂತೆ ವಿವಿಧ ಸ್ಥಳಗಳಲ್ಲಿರುವ ಕೊಳಚೆ ನಿರ್ಮೂಲನಾ ಮಂಡಳಿಗಳ ಕಚೇರಿಗಳು ಮತ್ತು ಸಂಬಂಧಿತ ಸ್ಥಳಗಳಲ್ಲಿ ಅಧಿಕಾರಿಗಳು ಏಕಕಾಲದಲ್ಲಿ ಶೋಧ ನಡೆಸಿದರು.

ದಾಳಿಯ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಬಿಲ್‌ಗಳು, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳು ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳಚೆ ನಿರ್ಮೂಲನಾ ಅಭಿವೃದ್ಧಿ ಇಲಾಖೆಯ ನಿವೃತ್ತ ಎಇಇ ಶಂಭುಲಿಂಗಪ್ಪ, ಕಾರ್ಯನಿರ್ವಾಹಕ ಎಂಜಿನಿಯರ್ ಲಮಾಣಿ, NTCC ಮ್ಯಾನೇಜರ್ ಎನ್. ಪ್ರಸಾದ್ ಹಾಗೂ ವಿಜಯಪುರ ಮೂಲದ ಗುತ್ತಿಗೆದಾರ ಗಿರಮಲಪ್ಪ ಜೋಗೂರ ವಿರುದ್ಧ ಪ್ರಕರಣ ದಾಖಲಾಗಿದೆ.

error: Content is protected !!