ಮುತ್ತಗಿ: ಬಸವನ ಬಾಗೇವಾಡಿ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಳೆದ ಸುಮಾರು 20 ದಿನಗಳಿಂದ ಗ್ರಾಮಸ್ಥರು ಕುಡಿಯಲು ಹಾಗೂ ದಿನನಿತ್ಯದ ಬಳಕೆಗೆ ಅಗತ್ಯವಾದ ನೀರಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ.
ಗ್ರಾಮದ ಎರಡನೇ ಮತ್ತು ನಾಲ್ಕನೇ ವಾರ್ಡ್‌ಗಳಲ್ಲಿ ನೀರಿನ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
“ನಾಳೆ ನೀರು ಬಿಡುತ್ತೇವೆ, ನಾಡಿದ್ದು ನೀರು ಪೂರೈಸುತ್ತೇವೆ” ಎಂಬ ಭರವಸೆಗಳನ್ನು ಅಧಿಕಾರಿಗಳು ನೀಡುತ್ತಿದ್ದರೂ, ಇದುವರೆಗೆ ಸಮರ್ಪಕವಾಗಿ ನೀರು ಸರಬರಾಜು ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಸ್ತಗಿರಾಸಾಬ್ ಬಿಳೇಕುದರಿ ಸೇರಿದಂತೆ ಪಂಚಾಯತ್ ಅಧಿಕಾರಿಗಳು ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ಸಮಸ್ಯೆ ಇದೇ ರೀತಿ ಮುಂದುವರಿದರೆ ಗ್ರಾಮ ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದು ಗ್ರಾಮ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇನ್ನಾದರೂ ಗ್ರಾಮ ಪಂಚಾಯತ್ ಅಧಿಕಾರಿಗಳು ಎಚ್ಚೆತ್ತುಕೊಂಡು ಮುತ್ತಗಿ ಗ್ರಾಮದ ಜನತೆಗೆ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
ವರದಿ: ಸಂಗಪ್ಪ ಚಲವಾದಿ
