ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್ ವ್ಯಸನದಿಂದ ಕುಟುಂಬ ಜೀವನ ಸಂಪೂರ್ಣ ಹಾಳಾಗಿದೆ ಎಂದು ಆರೋಪಿಸಿ ಪತಿಯೊಬ್ಬ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಮಹಾದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಮೃತ ಮಹಿಳೆಯನ್ನು 32 ವರ್ಷದ ಮಂಜುಳಾ ಎಂದು ಗುರುತಿಸಲಾಗಿದ್ದು, ಅವರು ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆರೋಪಿಯಾಗಿರುವ ಪತಿ ಪ್ರದೀಪ್, ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆಗೈದು ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುಷ್ಪಾಂಜಲಿ ಥಿಯೇಟರ್ ಸಮೀಪದ ನಿವಾಸದಲ್ಲಿ ಭಾನುವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದೆ. ಹತ್ಯೆಗೂ ಮುನ್ನ ಪ್ರದೀಪ್ ತನ್ನ ಮೊಬೈಲ್‌ನಲ್ಲಿ ವಿಡಿಯೋ ದಾಖಲಿಸಿಕೊಂಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ವಿಡಿಯೋದಲ್ಲಿ, ಆನ್‌ಲೈನ್ ಬೆಟ್ಟಿಂಗ್ ಚಟದಿಂದ ತನ್ನ ಕುಟುಂಬ ನಾಶವಾಗಿದೆ ಎಂದು ಆರೋಪಿಸಿರುವ ಪ್ರದೀಪ್, ತಾನು ಜೀವ ಕಳೆದುಕೊಳ್ಳುವುದರ ಜೊತೆಗೆ ತನ್ನ ಪತ್ನಿಯೂ ಬದುಕುವುದಿಲ್ಲ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ. ಅಲ್ಲದೆ, ಪತ್ನಿ ಮಂಜುಳಾ ತನ್ನ ತಾಯಿ ಹಾಗೂ ಸಹೋದರಿಯ ಪ್ರಭಾವಕ್ಕೆ ಒಳಗಾಗಿ ಬದಲಾಗಿದ್ದಾಳೆ ಎಂಬ ಆರೋಪವನ್ನೂ ವಿಡಿಯೋದಲ್ಲಿ ಮಾಡಿರುವುದಾಗಿ ತಿಳಿದುಬಂದಿದೆ.
ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದು, ಆತನ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಂಜುಳಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸುತ್ತಿರುವ ಪೊಲೀಸರು ಹತ್ಯೆಯ ನಿಖರ ಕಾರಣ ಹಾಗೂ ಹಿನ್ನೆಲೆ ಕುರಿತು ತನಿಖೆ ಮುಂದುವರಿಸಿದ್ದಾರೆ.
