ಭ್ರಷ್ಟಾಚಾರ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಬೃಹತ್ ದಾಳಿ ನಡೆಸಿದ್ದಾರೆ. ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ ಹಾಗೂ ಚಿಕ್ಕಮಗಳೂರಿನಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಹಲವು ಅಧಿಕಾರಿಗಳ ಮನೆ, ಕಚೇರಿ ಮತ್ತು ಆಸ್ತಿ ಕೇಂದ್ರಗಳನ್ನು ಪರಿಶೀಲಿಸಲಾಗಿದೆ.

ದಾವಣಗೆರೆಯಲ್ಲಿ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಕೃಷ್ಣ ನಾಯ್ಕ್, ಎನ್‌ಡಬ್ಲ್ಯೂಕೆಆರ್‌ಟಿಸಿ (NWKRTC) ಮುಖ್ಯ ಮೆಕ್ಯಾನಿಕಲ್ ಇಂಜಿನಿಯರ್ ಸಿದ್ದೇಶ್ವರ ಹೆಬ್ಬಾಳ ಹಾಗೂ ಕೆಆರ್‌ಐಡಿಎಲ್ (KRIDL) ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ ಅವರ ನಿವಾಸ, ಕಚೇರಿ ಹಾಗೂ ಫಾರ್ಮ್‌ಹೌಸ್‌ಗಳ ಮೇಲೆ ಲೋಕಾಯುಕ್ತದ 12 ತಂಡಗಳು ಏಕಕಾಲಕ್ಕೆ ದಾಳಿ ನಡೆಸಿವೆ.

ಕಾರ್ಯಾಚರಣೆ ವೇಳೆ ಸಿದ್ದೇಶ್ವರ ಹೆಬ್ಬಾಳ ಅವರ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ನಗದು ಪತ್ತೆಯಾದ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಇದೇ ವೇಳೆ ಬೆಳಗಾವಿ, ಹುಬ್ಬಳ್ಳಿ ಸೇರಿದಂತೆ ಹಲವು ಕಡೆಗಳಲ್ಲಿ ಲೋಕಾಯುಕ್ತ ತಂಡಗಳು ಅಧಿಕಾರಿಗಳ ಆಸ್ತಿ ವಿವರ, ಬ್ಯಾಂಕ್ ವ್ಯವಹಾರಗಳು ಹಾಗೂ ಆದಾಯ ಮೂಲಗಳ ಕುರಿತು ಪರಿಶೀಲನೆ ನಡೆಸುತ್ತಿವೆ. ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಕಲಬುರಗಿಯಲ್ಲಿ ಐದು ಕಡೆ ಕಾರ್ಯಾಚರಣೆ

ಕಲಬುರಗಿಯಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ಬಿರುಸಿನ ಕಾರ್ಯಾಚರಣೆ ನಡೆಸಿದ್ದಾರೆ. ನಿವೃತ್ತ ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್ ಹಾಗೂ ಸೂಪರಿಂಟೆಂಡೆಂಟ್ ಇಂಜಿನಿಯರ್ ಮಾಣಿಕ್ ಕನಕಟ್ಟಿ ಅವರಿಗೆ ಸೇರಿದ ಐದು ಸ್ಥಳಗಳಲ್ಲಿ ದಾಳಿ ನಡೆದಿದೆ.

ನಗರದ ಗೋದುತಾಯಿ ನಗರದಲ್ಲಿರುವ ನಿವಾಸ, ಬೀದರ್ ಜಿಲ್ಲೆಯ ಹಳ್ಳಿಖೇಡ ಗ್ರಾಮದ ಮನೆ, ಹುಮ್ನಾಬಾದ್‌ನ ಎರಡು ವಾಣಿಜ್ಯ ಸಂಕೀರ್ಣಗಳು ಹಾಗೂ ತೋಟದ ಮನೆಯನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಆಸ್ತಿ ಮತ್ತು ಆದಾಯ ಮೂಲಗಳ ಕುರಿತು ತನಿಖೆ ಮುಂದುವರಿದಿದೆ.

ಚಿಕ್ಕಮಗಳೂರಲ್ಲೂ ದಾಳಿ

ಚಿಕ್ಕಮಗಳೂರಿನಲ್ಲಿ ಅರಣ್ಯ ಇಲಾಖೆಯ ಎಸಿಎಫ್ (ACF) ಮೋಹನ್ ಅವರ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ನಗರದ ಕಲ್ಯಾಣನಗರದಲ್ಲಿರುವ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ದಾಖಲೆಗಳು ಹಾಗೂ ಆಸ್ತಿ ವಿವರಗಳನ್ನು ಪರಿಶೀಲಿಸಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ತಿರುಮಲೇಶ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದ್ದು, ನಿರಂತರವಾಗಿ ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದಿರುವ ಈ ಬೃಹತ್ ಕಾರ್ಯಾಚರಣೆ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತದ ಕಠಿಣ ಕ್ರಮಕ್ಕೆ ಸಾಕ್ಷಿಯಾಗಿದ್ದು, ತನಿಖೆ ಪೂರ್ಣಗೊಂಡ ಬಳಿಕ ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

Related News

error: Content is protected !!