ಬೆಂಗಳೂರು: ಅಧಿಕೃತ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಓ) ಶ್ರೀಮತಿ ಉಷಾ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು ಹಾಗೂ ವಿವಿಧ ಮೂಲಗಳಿಂದ ಪಿಡಿಓ ಉಷಾ ಅವರ ವಿರುದ್ಧ ಹಲವು ದೂರುಗಳು ಸಲ್ಲಿಕೆಯಾಗಿದ್ದವು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಮತ್ತು ಆಡಳಿತಾತ್ಮಕ ಲೋಪಗಳ ಬಗ್ಗೆ ಬಂದ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪಂಚಾಯಿತಿ ಆಡಳಿತವು ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದ್ದು, ಮುಂದಿನ ತನಿಖೆ ಹಾಗೂ ಇಲಾಖಾ ಕ್ರಮಗಳು ಮುಂದುವರಿಯಲಿವೆ.
ಇದೇ ವೇಳೆ, ದಾಸನಪುರ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ರುದ್ರಯ್ಯ ಅವರನ್ನು ಮುಂದಿನ ಆದೇಶದವರೆಗೆ ಪ್ರಭಾರಿ ಪಿಡಿಓ ಆಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಕ್ರಮ ಗ್ರಾಮ ಪಂಚಾಯಿತಿ ಆಡಳಿತ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ ಜಿಲ್ಲಾ ಪಂಚಾಯಿತಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದು ಗಮನಾರ್ಹವಾಗಿದೆ.
