ಸಿದ್ದಾಪುರ: ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ಹಾಗೂ ಸಿದ್ದಾಪುರ ಪೊಲೀಸ್ ಠಾಣೆಯ ಪಿಐ ಸೀತಾರಾಮ ಅವರನ್ನು ಅಮಾನತುಗೊಳಿಸಿ ಇಲಾಖಾ ತನಿಖೆ ನಡೆಸುವಂತೆ ಆಗ್ರಹಿಸಿ ಸಿದ್ದಾಪುರದಲ್ಲಿ ಭಾರೀ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದರು.

ಪ್ರತಿಭಟನೆಯ ವೇಳೆ ಮಾತನಾಡಿದ ಸಿದ್ದಾಪುರ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮನಮನೆ, ಪೊಲೀಸ್ ಅಧಿಕಾರಿಗಳಿಂದ ತಮ್ಮ ಹಾಗೂ ತಮ್ಮ ಕುಟುಂಬದ ಮೇಲೆ ನಿರಂತರ ಕಿರುಕುಳ ನಡೆಯುತ್ತಿದೆ ಎಂದು ಆರೋಪಿಸಿದರು. ಈ ಕುರಿತು ಈಗಾಗಲೇ ಲಿಖಿತ ದೂರು ಸಲ್ಲಿಸಿರುವುದಾಗಿ ತಿಳಿಸಿದರು.

ತಮ್ಮ ಮತ್ತು ಕುಟುಂಬ ಸದಸ್ಯರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳು ಪ್ರಕಟವಾಗಿದ್ದ ಹಿನ್ನೆಲೆಯಲ್ಲಿ ದೂರು ನೀಡಲಾಗಿತ್ತು. ತನಿಖೆ ವೇಳೆ ಸಂಬಂಧಿತ ವ್ಯಕ್ತಿಯ ಹೆಸರು ಪತ್ತೆಯಾಗಿದ್ದರೂ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ದೂರಿದರು. ಪ್ರಕರಣ ದಾಖಲಾಗಿದ್ದರೂ ಇದುವರೆಗೆ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿಲ್ಲ ಎಂದು ಆರೋಪಿಸಿದರು.

ಅಲ್ಲದೆ, ಡಿವೈಎಸ್ಪಿ ಹಾಗೂ ಪಿಐ ಹಲವು ಬಾರಿ ಠಾಣೆಗೆ ಕರೆಯಿಸಿ ಒತ್ತಡ ಹೇರಿದ್ದಾರೆ. ತಮ್ಮ ನಿವಾಸಕ್ಕೆ ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಿ ಕಿರುಕುಳ ನೀಡಲಾಗಿದೆ ಎಂದು ವಸಂತ ನಾಯ್ಕ ಆರೋಪಿಸಿದರು.

ಸಿದ್ದಾಪುರ ವ್ಯಾಪ್ತಿಯಲ್ಲಿ ನಡೆದ ಕೆಲವು ಕೊಲೆ, ಹಲ್ಲೆ, ಆತ್ಮಹತ್ಯೆ ಹಾಗೂ ಹಿಟ್ ಆ್ಯಂಡ್ ರನ್ ಪ್ರಕರಣಗಳ ತನಿಖೆಯಲ್ಲಿ ಲೋಪಗಳಾಗಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದವರ ಮೇಲೆಯೇ ಪ್ರಕರಣ ದಾಖಲಿಸುವ ಮೂಲಕ ಅನ್ಯಾಯ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ ಮುಖಂಡರು ಮತ್ತು ಸಾರ್ವಜನಿಕರು, ಸಂಬಂಧಿತ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಸಮಗ್ರ ತನಿಖೆ ನಡೆಸಿ ಅಗತ್ಯ ಕಾನೂನು ಹಾಗೂ ಇಲಾಖಾ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

Related News

error: Content is protected !!