ಮುಂಡಗೋಡ: ಅರಣ್ಯ ಇಲಾಖೆಯ ನಡುತೋಪು ಕಾಮಗಾರಿಗಳ ಕುರಿತು ಕಳೆದ ಮೂರು ವರ್ಷಗಳಲ್ಲಿ ನೆಡಲಾದ ಗಿಡಗಳ ಸಂಖ್ಯೆ ಹಾಗೂ ಪ್ರಸ್ತುತ ಬದುಕುಳಿದಿರುವ ಗಿಡಗಳ ನಿಖರ ಮಾಹಿತಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಬೇಕು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ.
ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ‘ದಶ ಲಕ್ಷ ಗಿಡ ನೆಡುವ ಅಭಿಯಾನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸಂಬಂಧ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಿಸಿಎಫ್) ಅವರಿಗೆ ನೀಡಿದ್ದ 30 ದಿನಗಳ ಗಡುವು ಅಂತ್ಯಕ್ಕೆ ಬಂದಿದ್ದು, ಈ ತಿಂಗಳೊಳಗೆ ಇಲಾಖೆಯಿಂದ ಸಮರ್ಪಕ ಉತ್ತರ ದೊರೆಯದಿದ್ದರೆ ಮುಂದಿನ ತಿಂಗಳು ಅರಣ್ಯವಾಸಿಗಳೊಂದಿಗೆ ಸಿಸಿಎಫ್ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅರಣ್ಯ ಇಲಾಖೆಯ ನಡುತೋಪು ಕಾಮಗಾರಿಗಳ ಕುರಿತು ಸಾರ್ವಜನಿಕರಲ್ಲಿ ಹಲವು ಅನುಮಾನಗಳು ಹಾಗೂ ಟೀಕೆಗಳು ವ್ಯಕ್ತವಾಗುತ್ತಿವೆ. ಹೀಗಾಗಿ ಮಾಹಿತಿ ಹಕ್ಕು ಅಧಿನಿಯಮ ಹಾಗೂ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದಡಿ ಕಳೆದ ಕೆಲವು ವರ್ಷಗಳಲ್ಲಿ ಕೈಗೊಂಡ ನಡುತೋಪು ಕಾಮಗಾರಿಗಳ ಸಂಪೂರ್ಣ ಮಾಹಿತಿಯನ್ನು ಇಲಾಖೆಯು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಅವರು ಒತ್ತಾಯಿಸಿದರು.
ಜುಲೈ 11ರವರೆಗೆ ತಾಲೂಕಾದ್ಯಂತ ನಿರಂತರವಾಗಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪರಿಸರ ಸಂರಕ್ಷಣೆ ಹಾಗೂ ಅರಣ್ಯ ಉಳಿವಿನ ಈ ಮಹತ್ವದ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರಣ್ಯವಾಸಿಗಳು ಭಾಗವಹಿಸಬೇಕು ಎಂದು ಕರೆ ನೀಡಿದರು.
ಮುಂಡಗೋಡಿನಂತಹ ಬಯಲು ಸೀಮೆ ಪ್ರದೇಶದಲ್ಲಿ ‘ದಶ ಲಕ್ಷ ಗಿಡ ನೆಡುವ ಅಭಿಯಾನ’ಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂಬ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದು ರವೀಂದ್ರ ನಾಯ್ಕ ತಿಳಿಸಿದರು.
