ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಮೂರು ತಿಂಗಳ ಗರ್ಭಿಣಿಯಾಗಿರುವುದು ಬಹಿರಂಗವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರು ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಾಹಿತಿಯ ಪ್ರಕಾರ, ಕಾಮುಕ ಚಂದ್ರು ಕಳೆದ ಒಂದು ವರ್ಷದಿಂದ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಬಾಲಕಿಯ ಪೋಷಕರು ಕುರಿ ಮೇಯಿಸಲು ಹೊರಗೆ ಹೋಗುತ್ತಿದ್ದ ಸಮಯದಲ್ಲಿ ಮನೆಗೆ ನುಗ್ಗಿ ಆಕೆಯ ಮೇಲೆ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ.
ಇಷ್ಟೇ ಅಲ್ಲದೆ, “ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುತ್ತೇನೆ” ಎಂದು ಪ್ರಾಣ ಬೆದರಿಕೆ ಹಾಕಿ ಬಾಲಕಿಯನ್ನು ಭಯಭೀತಳನ್ನಾಗಿ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಬಾಲಕಿಗೆ ಮೂರು ತಿಂಗಳಿನಿಂದ ಮುಟ್ಟು ಬಾರದ ಹಿನ್ನೆಲೆ ಅನುಮಾನಗೊಂಡ ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ವೇಳೆ ನಡೆದ ವೈದ್ಯಕೀಯ ಪರೀಕ್ಷೆಯಲ್ಲಿ ಅಪ್ರಾಪ್ತ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿರುವ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ.
ಈ ಘಟನೆ ಬಹಿರಂಗವಾಗುತ್ತಿದ್ದಂತೆ ಮೊರಾರ್ಜಿ ವಸತಿ ಶಾಲೆಯ ಆಡಳಿತದ ನಿರ್ಲಕ್ಷ್ಯದ ವಿರುದ್ಧವೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯರ ಆರೋಗ್ಯ ತಪಾಸಣೆ ಪ್ರತಿ ತಿಂಗಳು ನಡೆಸಬೇಕಿದ್ದರೂ, ಶಾಲೆಯಲ್ಲಿ ಈ ನಿಯಮವನ್ನು ಪಾಲಿಸದೇ ಬೇಜವಾಬ್ದಾರಿತನ ತೋರಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಪ್ರಕರಣ ಸಂಬಂಧ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದ್ದು, ಆರೋಪಿಯ ವಿರುದ್ಧ ತನಿಖೆ ಮುಂದುವರಿದಿದೆ. ಸದ್ಯ ನೊಂದ ಬಾಲಕಿಯನ್ನು ಬಾಲಮಂದಿರದ ಆಶ್ರಯದಲ್ಲಿ ಇರಿಸಲಾಗಿದೆ.
ಈ ಘಟನೆ ಇಡೀ ಪ್ರದೇಶವನ್ನೇ ಬೆಚ್ಚಿಬೀಳಿಸಿದ್ದು, ಅಪ್ರಾಪ್ತರ ಸುರಕ್ಷತೆ ಕುರಿತು ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
