ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಕೆಲವು ಪ್ರದೇಶಗಳಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇರುವ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಆಡಳಿತ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಮುಂಬರುವ ಗಣೇಶೋತ್ಸವ ಮತ್ತು ಈದ್ ಮಿಲಾದ್ ಸೇರಿದಂತೆ ವಿವಿಧ ಸಾರ್ವಜನಿಕ ಹಬ್ಬಗಳು ಶಾಂತಿಯುತವಾಗಿ ನಡೆಯುವಂತೆ ನೋಡಿಕೊಳ್ಳುವ ಉದ್ದೇಶದಿಂದ ಭಟ್ಕಳದಲ್ಲಿ 60ಕ್ಕೂ ಹೆಚ್ಚು ಮಂದಿಗೆ ಮುನ್ನೆಚ್ಚರಿಕಾ ನೋಟಿಸ್ ಜಾರಿಗೊಳಿಸಲಾಗಿದೆ. ಜಿಲ್ಲಾಡಳಿತದ ಮಾಹಿತಿ ಪ್ರಕಾರ, ನೋಟಿಸ್ ಪಡೆದವರಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದವರೂ ಸೇರಿದ್ದಾರೆ.

ಪೊಲೀಸ್ ಇಲಾಖೆಯ ವರದಿ ಹಾಗೂ ಗುಪ್ತಚರ ಮಾಹಿತಿಯ ಆಧಾರದ ಮೇಲೆ ತಹಶೀಲ್ದಾರ್ ಕಚೇರಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟುಮಾಡುವ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದ್ದು, ಸಮಾಜದಲ್ಲಿ ಅಶಾಂತಿ ಉಂಟುಮಾಡುವ ವರ್ತನೆ ತೋರದಿರುವ ಕುರಿತು ಮುಚ್ಚಳಿಕೆ ಬಾಂಡ್ ಸಲ್ಲಿಸುವಂತೆ ಸೂಚಿಸಲಾಗಿದೆ.

ನೋಟಿಸ್ ಜಾರಿ ಕ್ರಮದ ಬಗ್ಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಿರುವ ವರದಿಗಳಿದ್ದು, ಸಂಬಂಧಿತ ವ್ಯಕ್ತಿಗಳಿಗೆ ತಮ್ಮ ಅಭಿಪ್ರಾಯವನ್ನು ಮಂಡಿಸಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಜಿಲ್ಲಾಡಳಿತವು ಸಾರ್ವಜನಿಕರು ಪರಸ್ಪರ ಸಹಕಾರ ಮತ್ತು ಸಾಮರಸ್ಯ ಕಾಪಾಡಿಕೊಂಡು ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸುವಂತೆ ಮನವಿ ಮಾಡಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದೆ ಆಡಳಿತದೊಂದಿಗೆ ಸಹಕರಿಸುವಂತೆ ಕೋರಿದೆ.

error: Content is protected !!