ತುಮಕೂರು ತಾಲೂಕಿನ ಗೂಳೂರು ಹೋಬಳಿ ವ್ಯಾಪ್ತಿಯಲ್ಲಿ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣಾ ಪ್ರಕ್ರಿಯೆ) ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗ್ರಾಮ ಲೆಕ್ಕಾಧಿಕಾರಿ ಭಾವನಾ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಅವರನ್ನು ತಕ್ಷಣ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಐಸಿಯುನಲ್ಲಿ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರೂ, ವೈದ್ಯಕೀಯ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರು, ಸಹೋದ್ಯೋಗಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ವಲಯದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಭಾವನಾ ಅವರ ಪಾರ್ಥಿವ ಶರೀರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮಕ್ಕೆ ಕರೆದೊಯ್ಯಲಾಗಿದ್ದು, ಕುಟುಂಬಸ್ಥರು, ಬಂಧುಗಳು, ಗ್ರಾಮಸ್ಥರು ಮತ್ತು ಸಹೋದ್ಯೋಗಿಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿತು.
ಈ ಘಟನೆ ಬಳಿಕ ಎಸ್‌ಐಆರ್ ಪ್ರಕ್ರಿಯೆ ವೇಳೆ ಅಧಿಕಾರಿಗಳ ಮೇಲೆ ಇರುವ ಕಾರ್ಯಭಾರದ ಕುರಿತು ಮತ್ತೆ ಚರ್ಚೆಗಳು ಆರಂಭವಾಗಿವೆ. ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ಅಧಿಕಾರಿಗಳ ಸುರಕ್ಷತೆ ಮತ್ತು ಕೆಲಸದ ಒತ್ತಡದ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ವಿವಿಧ ಸಂಘಟನೆಗಳು ಆಗ್ರಹಿಸಿವೆ.
