ಹಾಸನ ಜಿಲ್ಲೆಯ ಅರಕಲಗೂಡು ಪೊಲೀಸ್ ಠಾಣೆಯ ಸಿಬ್ಬಂದಿ ಜಗದೀಶ್ ಅವರನ್ನು ಕರ್ತವ್ಯ ಲೋಪ, ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ ಹಾಗೂ ನ್ಯಾಯಾಧೀಶರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಗಳ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಲಭ್ಯ ಮಾಹಿತಿಯ ಪ್ರಕಾರ, ಜೂನ್ 28ರಂದು ರಾತ್ರಿ ಇಆರ್‌ಎಸ್‌ಎಸ್ (ERSS) ಕರ್ತವ್ಯದಲ್ಲಿದ್ದ ಜಗದೀಶ್ ಅವರಿಗೆ ಅರಕಲಗೂಡು ಪಟ್ಟಣದ ಅನಕೃ ವೃತ್ತದ ಬಳಿ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟು ಸೇದುತ್ತಿದ್ದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನ್ಯಾಯಾಧೀಶ ಲೋಕೇಶ್ ಸೂಚಿಸಿದ್ದರು. ಆದರೆ, ಈ ಸೂಚನೆಯನ್ನು ಪಾಲಿಸದೇ ಜಗದೀಶ್ ಉದ್ಧಟತನದಿಂದ ವರ್ತಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಉಂಟಾದ ವಾಗ್ವಾದದ ಸಂದರ್ಭದಲ್ಲಿ ನ್ಯಾಯಾಧೀಶರ ಮೊಬೈಲ್ ಫೋನ್ ಕಸಿದುಕೊಳ್ಳಲು ಜಗದೀಶ್ ಯತ್ನಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಸ್ಥಳದಲ್ಲಿದ್ದ ನ್ಯಾಯಾಲಯದ ಸಿಬ್ಬಂದಿ ಹಾಗೂ ಸಾರ್ವಜನಿಕರು ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದರೂ, ಜಗದೀಶ್ ತಮ್ಮ ವರ್ತನೆಯನ್ನು ಸಮರ್ಥಿಸಿಕೊಳ್ಳಲು ಮುಂದಾಗಿದ್ದರು ಎಂದು ತಿಳಿದುಬಂದಿದೆ.

ಪ್ರಾಥಮಿಕ ತನಿಖೆಯಲ್ಲಿ, ಕರ್ತವ್ಯದ ವೇಳೆ ಇಲಾಖೆಯ ಇಆರ್‌ಎಸ್‌ಎಸ್ ವಾಹನ ಬಳಸದೇ ಖಾಸಗಿ ವಾಹನದಲ್ಲಿ ತೆರಳಿರುವುದು, ನ್ಯಾಯಾಂಗದ ಪ್ರತಿನಿಧಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿರುವುದು ಹಾಗೂ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ವರ್ತಿಸಿರುವುದು ಬೆಳಕಿಗೆ ಬಂದಿದೆ.

ಈ ಎಲ್ಲ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ಅನ್ವಯ ಜಗದೀಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ಕುರಿತು ಇಲಾಖಾ ತನಿಖೆ ಮುಂದುವರಿದಿದೆ.

Related News

error: Content is protected !!