ಬಾಗಲಕೋಟೆ: ಜಿಲ್ಲೆಯ ಬೀಳಗಿ ಪಟ್ಟಣದ ಶ್ರೀ ದುರ್ಗಾದೇವಿ ಮಹಿಳಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಲ್ಲಿ ನಡೆದಿರುವ ಬಹುಕೋಟಿ ವಂಚನೆ ಪ್ರಕರಣದ ತನಿಖೆಗೆ ಮಹತ್ವದ ತಿರುವು ಸಿಕ್ಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೀಳಗಿ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ₹43.40 ಲಕ್ಷಕ್ಕೂ ಅಧಿಕ ಹಣದ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ.
ಸಂಸ್ಥೆಯ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸಿ ದೂರು ನೀಡಿದ ಬಳಿಕ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದರು. ತನಿಖೆಯ ಭಾಗವಾಗಿ ಸಂಸ್ಥೆಯ ಕಚೇರಿಯಲ್ಲಿ ಶೋಧ ನಡೆಸಿದ ಅಧಿಕಾರಿಗಳು 200ಕ್ಕೂ ಹೆಚ್ಚು ರಿಜಿಸ್ಟರ್‌ಗಳು, ವಿವಿಧ ದಾಖಲೆಗಳು, ರಸೀದಿ ಪುಸ್ತಕಗಳು ಹಾಗೂ ಕಂಪ್ಯೂಟರ್‌ಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.
ಪ್ರಕರಣದಲ್ಲಿ ಒಟ್ಟು ಒಂಬತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈಗಾಗಲೇ ಎಂಟು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ಪೈಕಿ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಉಳಿದ ಆರೋಪಿಗಳ ಪತ್ತೆ ಮತ್ತು ತನಿಖೆ ಮುಂದುವರಿದಿದೆ.
ಈ ಮಧ್ಯೆ, ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾಗಿರುವ ಸಾರ್ವಜನಿಕರು ತಮ್ಮ ಬಳಿ ಇರುವ ದಾಖಲೆಗಳೊಂದಿಗೆ ಕೂಡಲೇ ಬೀಳಗಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಮನವಿ ಮಾಡಿವೆ. ಪ್ರಕರಣದ ಸಂಪೂರ್ಣ ಜಾಲವನ್ನು ಭೇದಿಸಲು ಪೊಲೀಸರು ಇನ್ನಷ್ಟು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
