ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ನಂದಿಕಟ್ಟ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಂಕೆ ಮಾಂಸವನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಓರ್ವ ಆರೋಪಿಯನ್ನು ಬಂಧಿಸಿ, ಮತ್ತೋರ್ವ ಆರೋಪಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಮುಂಡಗೋಡ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಈರೇಶ್ ಕಬ್ಬಿನ ಹಾಗೂ ಮುಂಡಗೋಡ ವಲಯ ಅರಣ್ಯಾಧಿಕಾರಿ ಅಪ್ಪಾರಾವ್ ಕಲಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಂದಿಕಟ್ಟ ಗ್ರಾಮದಲ್ಲಿ ದಾಳಿ ನಡೆಸಿದರು.

ದಾಳಿಯ ವೇಳೆ ರಮೇಶ್ ಚವ್ವಾಣ್ ಎಂಬುವರ ಮನೆಯಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಸುಮಾರು 9 ಕೆಜಿ ಜಿಂಕೆ ಮಾಂಸವನ್ನು ವಶಪಡಿಸಿಕೊಂಡರು. ಈ ಸಂಬಂಧ ರಮೇಶ್ ಚವ್ವಾಣ್ ಅವರನ್ನು ಬಂಧಿಸಿ, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪರಾರಿಯಾದ ಮತ್ತೋರ್ವ ಆರೋಪಿಗಾಗಿ ಹುಡುಕಾಟ

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿತ ವಸಂತ್ ಕೊರವರ್ (ಮುಂಡಗೋಡ) ದಾಳಿ ವೇಳೆ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಅರಣ್ಯ ಇಲಾಖೆ ವಿಶೇಷ ತಂಡವನ್ನು ರಚಿಸಿ ಶೋಧ ಕಾರ್ಯ ಮುಂದುವರೆಸಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ವನ್ಯಜೀವಿ ಅಪರಾಧಗಳಿಗೆ ಕಠಿಣ ಕ್ರಮ

ವನ್ಯಜೀವಿಗಳ ಬೇಟೆ, ಮಾಂಸ ಸಾಗಣೆ ಹಾಗೂ ಮಾರಾಟ ಗಂಭೀರ ಅಪರಾಧವಾಗಿದ್ದು, ಇಂತಹ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ. ವನ್ಯಜೀವಿ ಸಂಬಂಧಿತ ಯಾವುದೇ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಡಿಆರ್‌ಎಫ್‌ಒಗಳಾದ ಸುನೀತಾ ಬಿ.ಎಂ., ಮುತ್ತಣ್ಣ ಹುಂದ್ರಾಳ, ಬೀಟ್ ಫಾರೆಸ್ಟರ್‌ಗಳಾದ ಅಮಿತ್ ಸಣ್ಣಕ್ಕಿ, ಹೇಮಾ ಕೂಸನೂರ್, ಮುಸ್ತಾಕ್ ಅಲಿ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು. ಯಶಸ್ವಿ ಕಾರ್ಯಾಚರಣೆ ನಡೆಸಿದ ತಂಡವನ್ನು ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ.

Related News

error: Content is protected !!