ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಿ. ಕೋಟಾ ಮಂಡಲ ಕೇಂದ್ರದಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ತಾಯಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಏಳು ವರ್ಷದ ಮಗುವಿನ ಮೇಲೆ ಗಂಭೀರ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಗಾಯಗೊಂಡ ಬಾಲಕ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

ಮಾಹಿತಿಯ ಪ್ರಕಾರ, ಪತಿ ಮೃತಪಟ್ಟ ಬಳಿಕ ಇಂದ್ರಜಾ ಎಂಬ ಮಹಿಳೆ ತನ್ನ ಏಳು ವರ್ಷದ ಮಗನೊಂದಿಗೆ ವಾಸಿಸುತ್ತಿದ್ದಳು. ಇದೇ ವೇಳೆ ರಾಜು ಎಂಬಾತನೊಂದಿಗೆ ಆಕೆಗೆ ಅಕ್ರಮ ಸಂಬಂಧ ಬೆಳೆದಿತ್ತು ಎನ್ನಲಾಗಿದೆ. ಈ ಸಂಬಂಧಕ್ಕೆ ಬಾಲಕ ಅಡ್ಡಿಯಾಗುತ್ತಿದ್ದಾನೆ ಎಂದು ಆರೋಪಿಸಲಾಗಿದ್ದು, ಇದೇ ಕಾರಣದಿಂದ ತಾಯಿ ಮತ್ತು ಆಕೆಯ ಪ್ರಿಯಕರ ಬಾಲಕನ ಮೇಲೆ ಬ್ಲೇಡ್‌ನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕನ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಬಾಲಕನಿಗೆ ಚಿಕಿತ್ಸೆ ನೀಡುತ್ತಿದ್ದು, ಆತನ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ.

ಈ ಘಟನೆ ಸಂಬಂಧ ಸ್ಥಳೀಯ ಪೊಲೀಸರು ಇಂದ್ರಜಾ ಹಾಗೂ ರಾಜು ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಮಾಯಕ ಮಗುವಿನ ಮೇಲಿನ ಈ ಅಮಾನವೀಯ ಕೃತ್ಯ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Related News

error: Content is protected !!