ನಂಜನಗೂಡು: ಮೈಸೂರಿನ ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಹುಲ್ಲಹಳ್ಳಿ ಪೊಲೀಸರು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಹುಲ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಡಬೂರು ಗ್ರಾಮದ ನಿವಾಸಿ ಸುರೇಶ್ ಬಂಧಿತ ಆರೋಪಿ. ಬಾಲಕಿಯ ತಂದೆ-ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ, ಮನೆಯಲ್ಲಿ ಬಾಲಕಿ ಒಬ್ಬಳೇ ಇರುವುದನ್ನು ಗಮನಿಸಿದ ಆರೋಪಿ ಮನೆಗೆ ನುಗ್ಗಿ ಆಕೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಆರೋಪಿಯ ವರ್ತನೆಯಿಂದ ಭಯಗೊಂಡ ಬಾಲಕಿ ಜೋರಾಗಿ ಕೂಗಿಕೊಂಡಿದ್ದು, ಕೂಗಾಟ ಕೇಳಿದ ಅಕ್ಕಪಕ್ಕದ ನಿವಾಸಿಗಳು ತಕ್ಷಣ ಮನೆಗೆ ಧಾವಿಸಿದ್ದಾರೆ. ಸ್ಥಳೀಯರು ಬರುತ್ತಿರುವುದನ್ನು ಕಂಡ ಆರೋಪಿ ಬಾಲಕಿಯ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಚೇತನ್ ಕುಮಾರ್ ಹಾಗೂ ಸಿಬ್ಬಂದಿ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ ಸುರೇಶ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related News

error: Content is protected !!