ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮಾರುತಿ ಬಡಾವಣೆಯಲ್ಲಿ ಮನಕಲಕುವ ಕುಟುಂಬ ದುರಂತವೊಂದು ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
ಮೃತರನ್ನು ಹರೀಶ್, ಅವರ ಪತ್ನಿ ನಿಶ್ಚಿತಾ, 7ನೇ ತರಗತಿ ವಿದ್ಯಾರ್ಥಿನಿ ನೆಕ್ಸಾ ಹಾಗೂ 1ನೇ ತರಗತಿ ಓದುತ್ತಿದ್ದ ರಕ್ಷಾ ಎಂದು ಗುರುತಿಸಲಾಗಿದೆ. ಹರೀಶ್ ಕುಟುಂಬದೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಘಟನೆ ನಡೆದ ಬಳಿಕ ನಾಲ್ವರೂ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಪತ್ನಿ ಹಾಗೂ ಮಕ್ಕಳ ಬಾಯಿ ಮತ್ತು ಮೂಗಿನ ಭಾಗವನ್ನು ಪ್ಲಾಸ್ಟರ್‌ನಿಂದ ಮುಚ್ಚಿ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಬಳಿಕ ಹರೀಶ್ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಘಟನೆ ನಡೆದ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದು, ಶಾಲೆಗೆ ಹೋಗುತ್ತಿದ್ದ ಇಬ್ಬರು ಮುಗ್ಧ ಮಕ್ಕಳ ದಾರುಣ ಸಾವಿಗೆ ಕಂಬನಿ ಮಿಡಿದಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಘಟನೆಗೆ ನಿಖರ ಕಾರಣ ಏನು ಎಂಬುದು ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದುರ್ಘಟನೆಯಿಂದ ಹುಣಸೂರಿನ ಮಾರುತಿ ಬಡಾವಣೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಕೌಟುಂಬಿಕ ಸಮಸ್ಯೆಗಳ ನಡುವೆಯೂ ಮುಗ್ಧ ಮಕ್ಕಳ ಜೀವ ಬಲಿಯಾದ ಘಟನೆ ಸಾರ್ವಜನಿಕರ ಮನಸ್ಸನ್ನು ತೀವ್ರವಾಗಿ ಕಾಡಿದೆ.
