ಬಳ್ಳಾರಿ, ಜುಲೈ 23: ಕಾಂಗ್ರೆಸ್ ಸರ್ಕಾರ ಪ್ರಧಾನಿ ನಿವಾಸದ ಎದುರು ಶಿಷ್ಟಾಚಾರ ಉಲ್ಲಂಘಿಸಿ ಪ್ರತಿಭಟನೆ ನಡೆಸಲು ಯತ್ನಿಸಿದೆ ಎಂದು ಆರೋಪಿಸಿ, ಬಳ್ಳಾರಿಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ನಾಯ್ಡು ಹಾಗೂ ಬಳ್ಳಾರಿ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದರು.
ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಪ್ರಧಾನಿ ನಿವಾಸದಂತಹ ಅತ್ಯಂತ ಭದ್ರತಾ ಪ್ರದೇಶದ ಎದುರು ಪ್ರತಿಭಟನೆಗೆ ಮುಂದಾಗಿರುವುದು ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಪ್ರಜಾಪ್ರಭುತ್ವದ ಶಿಷ್ಟಾಚಾರಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಾಯಕರು, ದೇಶದ ಉನ್ನತ ಹುದ್ದೆಗಳಿಗೆ ಗೌರವ ನೀಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ರಾಜಕೀಯ ಭಿನ್ನಾಭಿಪ್ರಾಯಗಳ ಹೆಸರಿನಲ್ಲಿ ಶಿಷ್ಟಾಚಾರವನ್ನು ಉಲ್ಲಂಘಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿದ ಅವರು, ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ವೇಳೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಂಡಿತ್ತು.
ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಭಾಗವಹಿಸುವಿಕೆಯಿಂದ ಪ್ರತಿಭಟನೆ ಗಮನ ಸೆಳೆದಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನವನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸಿದರು.
ವರದಿ: ಹನುಮಂತ
