ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷೆಯಲ್ಲಿನ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಶನಿವಾರ ಅಧಿಕೃತವಾಗಿ ಘೋಷಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.
ರಾಜೀನಾಮೆ ಕುರಿತು ಮಾತನಾಡಿದ ಧರ್ಮೇಂದ್ರ ಪ್ರಧಾನ್, ದೇಶದ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯ ಮತ್ತು ಪರೀಕ್ಷಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಮರುಸ್ಥಾಪಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ಇದೇ ಕಾರಣದಿಂದ ತಾವು ಈ ನಿರ್ಧಾರ ಕೈಗೊಂಡಿರುವುದಾಗಿ ಸ್ಪಷ್ಟಪಡಿಸಿದರು.
ಅದೇ ವೇಳೆ, ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಕೆಲವು ದೇಶವಿರೋಧಿ ಹಾಗೂ ರಾಜಕೀಯ ಹಿತಾಸಕ್ತಿ ಹೊಂದಿರುವ ಶಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವ ಪ್ರಯತ್ನ ನಡೆಯುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಅಂತಹ ಪ್ರಯತ್ನಗಳಿಗೆ ಅವಕಾಶ ನೀಡದ ಉದ್ದೇಶದಿಂದಲೂ ರಾಜೀನಾಮೆ ಸಲ್ಲಿಸಿರುವುದಾಗಿ ಹೇಳಿದರು.
ಪ್ರತಿಭಟನೆಗೆ ಕಾರಣವೇನು?
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ನೀಟ್-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ಆರೋಪ ಕೇಳಿಬಂದ ಬಳಿಕ ದೇಶದಾದ್ಯಂತ ವಿದ್ಯಾರ್ಥಿ ಸಂಘಟನೆಗಳು ಮತ್ತು ವಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದವು. ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಹಲವು ದಿನಗಳಿಂದ ಹೋರಾಟ ಮುಂದುವರಿದಿತ್ತು.
ಇದೀಗ ಬೆಳವಣಿಗೆಯ ನಡುವೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಘೋಷಿಸಿದ್ದು, ಪ್ರಕರಣದ ತನಿಖೆಯನ್ನು ಈಗಾಗಲೇ ಸಿಬಿಐಗೆ (CBI) ವಹಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು, ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ತಮ್ಮ ಶಿಕ್ಷಣ ಹಾಗೂ ಭವಿಷ್ಯದತ್ತ ಗಮನಹರಿಸುವಂತೆ ಮನವಿ ಮಾಡಿದ್ದಾರೆ.
