ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಭಾರತೀಯ ನ್ಯಾಯ ಸಂಹಿತೆ (BNS) ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಜುಲೈ 18ರಂದು ಕೋಟಭಾಗಿ ಗ್ರಾಮದ ಮಹಿಬೂಬ್ ಬಾಬುಸಾಬ್ ಜಮಾದಾರ್ ಅವರಿಗೆ ಕಾಕತಿ ಮೂಲದ ವ್ಯಕ್ತಿಯೊಬ್ಬ ಗಾಂಜಾ ಚೀಟಗಳನ್ನು ಖರೀದಿಸುವಂತೆ ಒತ್ತಾಯಿಸಿ ಎರಡು ಚೀಟಗಳಿಗೆ ₹1,000 ನೀಡಿದ್ದ. ಸ್ವಲ್ಪ ಸಮಯದ ಬಳಿಕ ಕಾರಿನಲ್ಲಿ ಬಂದ ನಾಲ್ವರು ಆರೋಪಿಗಳು ತಮ್ಮನ್ನು ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು ದೂರುದಾರರನ್ನು ಸಮೀಪದ ಕಬ್ಬಿನ ಗದ್ದೆಗೆ ಕರೆದೊಯ್ದಿದ್ದಾರೆ. ಅಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಆರೋಪ ಹೊರಿಸಿ ಬೆದರಿಕೆ ಹಾಕಿದ್ದು, ಅವರ ಬಳಿಯಿದ್ದ ಗಾಂಜಾ ಪೊಟ್ಟಣಗಳನ್ನು ಪ್ರದರ್ಶಿಸಿ ಫೋಟೋ ಹಾಗೂ ವಿಡಿಯೊ ಚಿತ್ರೀಕರಿಸಿದ್ದಾರೆ. ನಂತರ ದೂರುದಾರರನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಹುಕ್ಕೇರಿ ಪೊಲೀಸ್ ಠಾಣೆ ಸಮೀಪಕ್ಕೆ ಕರೆತಂದು, ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಸಿ ₹2 ಲಕ್ಷದಿಂದ ₹3 ಲಕ್ಷದವರೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ₹60 ಸಾವಿರ ಪಡೆದು, ಚಿತ್ರೀಕರಿಸಿದ ವಿಡಿಯೊವನ್ನು ‘ಜಿ.ಡಿ. ಟಿವಿ’ ಹೆಸರಿನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 164/2026 ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಜುಲೈ 24ರಂದು ಬೆಳಗಾವಿಯಲ್ಲಿ ಕಲ್ಲಪ್ಪ ಬಸವಣ್ಣಿ ಮಾಳಾಜ, ಮಲ್ಲಿಕಾರ್ಜುನ ಸಿದ್ದಪ್ಪ ಜುಲಫಿ, ಪೃಥ್ವಿರಾಜ್ ನಾರಾಯಣ ಚೌಹಾಣ್ ಹಾಗೂ ಡೇವಿಡ್ ಜಾಕೋಬ್ ತಂಗೇರಾಳ ಅವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಮಹಾರಾಷ್ಟ್ರ ನೋಂದಣಿಯ ಮಾರುತಿ ಎರ್ಟಿಗಾ ಕಾರು, ಹೀರೋ ಎಚ್‌ಎಫ್ ಡಿಲಕ್ಸ್ ಬೈಕ್, ಎರಡು ಮೊಬೈಲ್ ಫೋನ್‌ಗಳು ಹಾಗೂ ಸುಲಿಗೆ ಮಾಡಿದ್ದ ₹34 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಗಳನ್ನು ಹುಕ್ಕೇರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Related News

error: Content is protected !!