ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕಿರಿಯ ಶ್ರೇಣಿ ನ್ಯಾಯಾಧೀಶೆ ಗಾಯತ್ರಿ ವಿರುದ್ಧ ರೋಡ್ ರೇಜ್‌ಗೆ ಸಂಬಂಧಿಸಿದ ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಘಟನೆ ಈಗ ಕಾನೂನು ವಲಯದಲ್ಲೇ ಚರ್ಚೆಗೆ ಕಾರಣವಾಗಿದೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಬೆಂಗಳೂರು ವಕೀಲರ ಸಂಘ ನ್ಯಾಯಾಧೀಶೆಯ ನಡೆ ಖಂಡಿಸಿ, ಅವರನ್ನು ಅಮಾನತುಗೊಳಿಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು ಒತ್ತಾಯಿಸಿದೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ತಾಯಿ ಮತ್ತು ಮಗ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕೈ ತೋರಿಸಿದ ವಿಚಾರವನ್ನು ನೆಪವಾಗಿಸಿಕೊಂಡು ನ್ಯಾಯಾಧೀಶೆ ಅವರ ವಾಹನವನ್ನು ಹಿಂಬಾಲಿಸಿ ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಸ್ಥಳಕ್ಕೆ ಕೋರ್ಟ್ ಪೊಲೀಸ್ ಸಿಬ್ಬಂದಿಯನ್ನು ಕರೆಸಿಕೊಂಡು ಯುವಕನ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವ ಆರೋಪವೂ ಕೇಳಿಬಂದಿದೆ. ಈ ವೇಳೆ ಪೊಲೀಸ್ ಪೇದೆ ಶ್ರೀಧರ್ ಎಂಬವರು ಯುವಕನಿಗೆ ಕಪಾಳಮೋಕ್ಷ ಮಾಡಿದರೆಂದು ಹೇಳಲಾಗಿದ್ದು, ಯುವಕನ ತಾಯಿ ತಮ್ಮ ಮಗ ಯಾವುದೇ ತಪ್ಪು ಮಾಡಿಲ್ಲ ಎಂದು ಪದೇಪದೇ ಮನವಿ ಮಾಡಿದರೂ ಪರಿಸ್ಥಿತಿ ಬದಲಾಗಲಿಲ್ಲ ಎನ್ನಲಾಗಿದೆ. ಘಟನೆಯ ಸಂಪೂರ್ಣ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಬೆಂಗಳೂರು ವಕೀಲರ ಸಂಘ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ನ್ಯಾಯಾಧೀಶರು ಸಾರ್ವಜನಿಕರೊಂದಿಗೆ ನಡೆದುಕೊಳ್ಳುವಲ್ಲಿ ಸಂಯಮ ಮತ್ತು ನಿಷ್ಪಕ್ಷಪಾತತೆ ಕಾಪಾಡಬೇಕು ಎಂದು ಅಭಿಪ್ರಾಯಪಟ್ಟಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ಸತ್ಯಾಂಶ ಹೊರಬರಬೇಕು ಹಾಗೂ ಅಗತ್ಯವಿದ್ದರೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಂಘ ಆಗ್ರಹಿಸಿದೆ. ಈ ಘಟನೆ ನ್ಯಾಯಾಂಗದ ಜವಾಬ್ದಾರಿ, ಅಧಿಕಾರದ ಬಳಕೆ ಮತ್ತು ಸಾರ್ವಜನಿಕರೊಂದಿಗೆ ಅಧಿಕಾರಿಗಳ ವರ್ತನೆ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Related News

error: Content is protected !!