ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ.
ಮಾಹಿತಿಯ ಪ್ರಕಾರ, ಹಾಸ್ಟೆಲ್‌ನಲ್ಲಿ ವಾಸವಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ, ತಾಲ್ಲೂಕಿನ ಕರಿಯಣ್ಣ ಎಂಬ ಚಾಲಕನ ಪರಿಚಯವಾಗಿ ಪ್ರೀತಿಯ ಸಂಬಂಧ ಬೆಳೆಸಿಕೊಂಡಿದ್ದಳು. ಈ ಸಂಬಂಧದ ಪರಿಣಾಮವಾಗಿ ಆಕೆ ಗರ್ಭಿಣಿಯಾಗಿದ್ದಳು ಎನ್ನಲಾಗಿದೆ.
ನಿನ್ನೆ ಬಾಲಕಿಯ ತಾಯಿ ಆಕೆಯನ್ನು ಹಾಸ್ಟೆಲ್‌ನಿಂದ ಕರೆದುಕೊಂಡು ಬಂದು ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿದ್ದಾರೆ. ಹೆರಿಗೆಯ ವೇಳೆ ಬಾಲಕಿ ಅಪ್ರಾಪ್ತೆ ಎಂಬುದು ತಿಳಿದ ಆಸ್ಪತ್ರೆ ಸಿಬ್ಬಂದಿ ಕೂಡಲೇ ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಹಿರಿಯೂರು ನಗರ ಠಾಣೆ ಪೊಲೀಸರು ತನಿಖೆ ಆರಂಭಿಸಿ, ಆರೋಪಿ ಕರಿಯಣ್ಣ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಇದೇ ವೇಳೆ ಅಪ್ರಾಪ್ತ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಖಿ ಕೇಂದ್ರಕ್ಕೆ ಸ್ಥಳಾಂತರಿಸಿ ಅಗತ್ಯ ಆರೈಕೆ ಹಾಗೂ ಕೌನ್ಸೆಲಿಂಗ್ ವ್ಯವಸ್ಥೆ ಮಾಡಲಾಗಿದೆ. ಪ್ರಕರಣದ ಕುರಿತು ಹಿರಿಯೂರು ನಗರ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
