ಕಲಬುರಗಿಯಲ್ಲಿ ಸಾಮಾಜಿಕ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ವ್ಯಕ್ತಿಯ ವಿರುದ್ಧ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದೆ. ರಾಷ್ಟ್ರ ರಕ್ಷಣಾ ಪಡೆಯ ಜಿಲ್ಲಾಧ್ಯಕ್ಷ ಮಡಿವಾಳಪ್ಪ ಅಮರಾವತಿ ವಿರುದ್ಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ದೂರಿನ ಪ್ರಕಾರ, ಕಷ್ಟದಲ್ಲಿದ್ದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡಿದ್ದ ಆರೋಪಿ, ಜುಲೈ 11ರಂದು ಆಕೆಯನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದು ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಕಾರಿನೊಳಗೆ ಕಿರುಕುಳ ಹೆಚ್ಚಾಗುತ್ತಿದ್ದಂತೆ ಯುವತಿ ತಕ್ಷಣವೇ ತುರ್ತು ಸೇವೆ ಸಂಖ್ಯೆ 112ಕ್ಕೆ ಕರೆ ಮಾಡಿ ಪೊಲೀಸರ ನೆರವು ಕೋರಿದ್ದಾಳೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸುತ್ತಿದ್ದಂತೆ, ಪೊಲೀಸ್ ವಾಹನವನ್ನು ಗಮನಿಸಿದ ಆರೋಪಿ ಯುವತಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆ ಹಾಗೂ ತನಿಖೆ ನಡೆಸುತ್ತಿದ್ದಾರೆ.
ಈ ಘಟನೆ ಬೆಳಕಿಗೆ ಬಂದ ಬಳಿಕ ಆರೋಪಿಯ ಪತ್ನಿಯೂ ತನ್ನ ಪತಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಆತನ ವಿರುದ್ಧ ತಾನೂ ದೂರು ನೀಡುವುದಾಗಿ ಹೇಳಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಮತ್ತೊಂದೆಡೆ, ತನ್ನ ವಿರುದ್ಧದ ಎಲ್ಲಾ ಆರೋಪಗಳನ್ನು ಮಡಿವಾಳಪ್ಪ ಅಮರಾವತಿ ತಳ್ಳಿಹಾಕಿದ್ದು, “ಯುವತಿ ಸಂಕಷ್ಟದಲ್ಲಿದ್ದ ಕಾರಣ ಹಣಕಾಸಿನ ನೆರವು ನೀಡಿದ್ದೇನೆ. ಯಾವುದೇ ರೀತಿಯ ಲೈಂಗಿಕ ಕಿರುಕುಳ ನೀಡಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.
ಪ್ರಕರಣದಲ್ಲಿ ಎರಡೂ ಪಕ್ಷಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿರುವ ಪೊಲೀಸರು, ಲಭ್ಯವಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದು, ನಿಜಾಂಶ ತನಿಖೆ ಪೂರ್ಣಗೊಂಡ ಬಳಿಕವೇ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ.
