
ಹುಕ್ಕೇರಿ: ರಾಜ್ಯಾದ್ಯಂತ ನಡೆಯುತ್ತಿರುವ ಪಡಿತರ ಚೀಟಿ (ರೇಷನ್ ಕಾರ್ಡ್) ಸರ್ವೇ ಕಾರ್ಯಕ್ಕೆ ತಾಂತ್ರಿಕ ಸಮಸ್ಯೆಗಳು ಅಡ್ಡಿಯಾಗಿದ್ದು, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಸಾರ್ವಜನಿಕರು ಹಾಗೂ ಸರ್ವೇಯರ್‌ಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಸರ್ಕಾರ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿಗದಿತ ಅವಧಿಯೊಳಗೆ ಪಡಿತರ ಚೀಟಿಗೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಿ ಸರ್ವೇ ಕಾರ್ಯ ಪೂರ್ಣಗೊಳಿಸುವಂತೆ ಸೂಚನೆ ನೀಡಿದೆ. ಆದರೆ ಸರ್ವೇಯರ್‌ಗಳು ಬಳಸುತ್ತಿರುವ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪದೇಪದೇ ತಾಂತ್ರಿಕ ದೋಷ ಕಾಣಿಸಿಕೊಳ್ಳುತ್ತಿರುವುದು, ಸರ್ವರ್ ಡೌನ್ ಆಗುತ್ತಿರುವುದು ಹಾಗೂ ಫಲಾನುಭವಿಗಳ ದಾಖಲೆಗಳು ಮತ್ತು ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲು ಸಾಧ್ಯವಾಗದಿರುವುದು ಸಮಸ್ಯೆಯಾಗಿ ಪರಿಣಮಿಸಿದೆ.
ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ
ಪಡಿತರ ಚೀಟಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಮಾಹಿತಿಯನ್ನು ನೀಡಲು ಸಾರ್ವಜನಿಕರು ಸಿದ್ಧರಿದ್ದರೂ, ಆ್ಯಪ್ ಮತ್ತು ಸರ್ವರ್ ಸಮಸ್ಯೆಯಿಂದಾಗಿ ಸರ್ವೇ ಕಾರ್ಯ ವಿಳಂಬವಾಗುತ್ತಿದೆ. ಕೆಲವೆಡೆ ಫಲಾನುಭವಿಗಳು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರ ಸಮಯವೂ ವ್ಯರ್ಥವಾಗುತ್ತಿದೆ.
ತಾಂತ್ರಿಕ ಸಮಸ್ಯೆಯಿಂದಾಗಿ ನಿಗದಿತ ಗಡುವಿನೊಳಗೆ ಸರ್ವೇ ಕಾರ್ಯ ಪೂರ್ಣಗೊಳಿಸುವುದು ಕಷ್ಟವಾಗಲಿದೆ ಎಂದು ಸರ್ವೇಯರ್‌ಗಳು ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.
ಕಾಲಾವಕಾಶ ವಿಸ್ತರಣೆಗೆ ಆಗ್ರಹ
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಸಂಬಂಧಪಟ್ಟ ತಾಂತ್ರಿಕ ವಿಭಾಗವು ತಕ್ಷಣ ಮಧ್ಯಪ್ರವೇಶಿಸಿ ಸರ್ವರ್ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ಮೊಬೈಲ್ ಆ್ಯಪ್‌ನಲ್ಲಿರುವ ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ನಿವಾರಿಸಬೇಕು ಎಂದು ಸಾರ್ವಜನಿಕರು ಹಾಗೂ ಸರ್ವೇಯರ್‌ಗಳು ಆಗ್ರಹಿಸಿದ್ದಾರೆ.
ತಾಂತ್ರಿಕ ಅಡಚಣೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಪಡಿತರ ಚೀಟಿ ಸರ್ವೇ ಕಾರ್ಯ ಪೂರ್ಣಗೊಳಿಸಲು ಹೆಚ್ಚುವರಿ ಕಾಲಾವಕಾಶ ನೀಡಬೇಕು ಎಂಬ ಬೇಡಿಕೆಯೂ ವ್ಯಕ್ತವಾಗಿದೆ.
ತಾಲೂಕು ಆಡಳಿತ, ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಸರ್ವೇಯರ್‌ಗಳು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ಸಂಕಷ್ಟಕ್ಕೆ ಶೀಘ್ರ ಪರಿಹಾರ ಕಲ್ಪಿಸಬೇಕು. “ರೇಷನ್ ಕಾರ್ಡ್ ಸರ್ವೇಗೆ ತಾಂತ್ರಿಕ ಸಮಸ್ಯೆ ಯಾವಾಗ ಬಗೆಹರಿಯಲಿದೆ? ಇದೇ ಪರಿಸ್ಥಿತಿ ಮುಂದುವರಿದರೆ ನಿಗದಿತ ಅವಧಿಯಲ್ಲಿ ಸರ್ವೇ ಪೂರ್ಣಗೊಳ್ಳುವುದು ಹೇಗೆ?” ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.






