
ಚಿಕ್ಕಬಳ್ಳಾಪುರ: ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತೆಯೇ ಮನೆಯಲ್ಲೇ ಯಾವುದೇ ಅಧಿಕೃತ ಅನುಮತಿ ಇಲ್ಲದೆ ಅಕ್ರಮ ಕ್ಲಿನಿಕ್ ನಡೆಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸ್ಟಾಫ್ ನರ್ಸ್‌ವೊಬ್ಬರನ್ನು ಆರೋಗ್ಯ ಇಲಾಖೆ ಅಮಾನತುಗೊಳಿಸಿದೆ.
ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ಟಾಫ್ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ಬಿ. ಸುನಿತಾ ಅವರು, ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲೇ ಅಕ್ರಮವಾಗಿ ಕ್ಲಿನಿಕ್ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು. ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆರೋಪ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.
ಸಂಸದ ಡಾ. ಕೆ. ಸುಧಾಕರ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ಅವರ ತವರು ಪ್ರದೇಶವಾದ ಪೆರೇಸಂದ್ರದಲ್ಲೇ ಈ ರೀತಿಯ ಅಕ್ರಮ ಕ್ಲಿನಿಕ್ ಕಾರ್ಯನಿರ್ವಹಿಸುತ್ತಿರುವುದು ಚರ್ಚೆಗೆ ಗ್ರಾಸವಾಗಿತ್ತು.
ಮಾಧ್ಯಮ ವರದಿ ಬಳಿಕ ಕ್ರಮ
ಅಕ್ರಮ ಕ್ಲಿನಿಕ್ ಕುರಿತು ಮಾಧ್ಯಮಗಳಲ್ಲಿ ನಿರಂತರವಾಗಿ ವರದಿಗಳು ಪ್ರಕಟವಾಗಿದ್ದರೂ ಆರಂಭದಲ್ಲಿ ಆರೋಗ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಘಟನೆ ಬೆಳಕಿಗೆ ಬಂದ ಬಳಿಕ ಸುಮಾರು 15 ದಿನಗಳಾದರೂ ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ಅವರ ಸೂಚನೆಯ ಮೇರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್.ಸಿ. ಚೇತನ್ ಅವರು ಜಿ.ಬಿ. ಸುನಿತಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇಲಾಖಾ ತನಿಖೆಗೆ ಆದೇಶ
ಅಮಾನತಿನ ಜೊತೆಗೆ ನರ್ಸ್ ವಿರುದ್ಧ ಇಲಾಖಾ ತನಿಖೆಗೂ ಆರೋಗ್ಯ ಇಲಾಖೆ ಆದೇಶಿಸಿದೆ. ಕರ್ತವ್ಯಲೋಪ ಹಾಗೂ ನಿಯಮಬಾಹಿರವಾಗಿ ವೈದ್ಯಕೀಯ ಚಿಕಿತ್ಸೆ ನೀಡಿದ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಯಲಿದೆ.
ತನಿಖಾ ವರದಿ ಆಧರಿಸಿ ಮುಂದಿನ ಕಾನೂನು ಹಾಗೂ ಇಲಾಖಾ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.






