ಧಾರವಾಡ: ಅರಣ್ಯ ಇಲಾಖೆಯಲ್ಲಿ ಅರಣ್ಯ ಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 38 ವರ್ಷದ ನೌಕರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಕುಮಾರೇಶ್ವರ ಬಡಾವಣೆಯಲ್ಲಿ ನಡೆದಿದೆ.

ಮೃತರನ್ನು ವಿಠ್ಠಲ್ ಜೋನಿ ಎಂದು ಗುರುತಿಸಲಾಗಿದೆ. ಇವರು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಅರಣ್ಯ ಇಲಾಖೆಯಲ್ಲಿ ಅರಣ್ಯ ಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ, ಈ ಹಿಂದೆ ಅರಣ್ಯ ಇಲಾಖೆ ನೌಕರರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು ಎಂದು ತಿಳಿದುಬಂದಿದೆ.

ವಿಠ್ಠಲ್ ಜೋನಿ ಅವರು ಕಳೆದ ರಾತ್ರಿ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬಂದ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಆದರೆ, ವಿಠ್ಠಲ್ ಜೋನಿ ಅವರ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ತನಿಖೆಯ ಬಳಿಕವಷ್ಟೇ ಆತ್ಮಹತ್ಯೆಯ ಹಿಂದಿನ ಕಾರಣ ತಿಳಿದುಬರಬೇಕಿದೆ.

ವರದಿ: ಶಿವು ಪಿ.ಆರ್.

Related News

error: Content is protected !!