
ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ
ಮುಂಡಗೋಡ: 12 ವರ್ಷದ ಬಾಲಕಿಯ ಮೇಲೆ ನಡೆದಿರುವ ಅಮಾನವೀಯ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ವಿವಿಧ ಹಿಂದೂಪರ ಸಂಘಟನೆಗಳು, ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಸಂತ್ರಸ್ತ ಬಾಲಕಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ನವೆಂಬರ್ 12ರಂದು ಮುಂಡಗೋಡ ಪಟ್ಟಣ ಬಂದ್ಗೆ ಕರೆ ನೀಡಿವೆ.
ಅಪ್ರಾಪ್ತ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಮತ್ತು ಆತಂಕಕ್ಕೆ ಕಾರಣವಾಗಿದೆ. ಇಂತಹ ಹೀನ ಕೃತ್ಯ ಎಸಗಿರುವ ಆರೋಪಿಗೆ ಕಾನೂನಿನಡಿ ಅತ್ಯಂತ ಕಠಿಣ ಶಿಕ್ಷೆಯಾಗಬೇಕು. ಬಾಲಕಿಗೆ ನ್ಯಾಯ ದೊರೆಯುವುದರ ಜೊತೆಗೆ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನವೆಂಬರ್ 12ರಂದು ಬೆಳಿಗ್ಗೆ 10 ಗಂಟೆಗೆ ಮುಂಡಗೋಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂತ್ರಸ್ತ ಬಾಲಕಿಗೆ ನ್ಯಾಯ ದೊರಕಿಸುವ ಹೋರಾಟಕ್ಕೆ ಬೆಂಬಲ ನೀಡುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ಬಾಲಕಿಯರು ಮತ್ತು ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅಪ್ರಾಪ್ತರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ತ್ವರಿತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬುದು ಪ್ರತಿಭಟನೆಯ ಪ್ರಮುಖ ಬೇಡಿಕೆಯಾಗಿದೆ.
ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಟ್ಟಣದ ವ್ಯಾಪಾರಸ್ಥರು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳವರು ಸ್ವಯಂಪ್ರೇರಿತವಾಗಿ ಸಹಕರಿಸುವಂತೆ ಹಿಂದೂಪರ ಸಂಘಟನೆಗಳು ಮನವಿ ಮಾಡಿವೆ.






