ಚಿನ್ನಾಭರಣ ದೋಚಿ ವೃದ್ಧೆಯ ಹತ್ಯೆ; ಕೃತ್ಯಕ್ಕೆ ಬಳಸಿದ ಬೈಕ್ ಸೇರಿದಂತೆ ಚಿನ್ನಾಭರಣ ವಶ

ಮುಂಡಗೋಡ: ತಾಲೂಕಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 75 ವರ್ಷದ ವೃದ್ಧ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ ಚಿನ್ನಾಭರಣ ದೋಚಿದ್ದ ಪ್ರಕರಣವನ್ನು ಮುಂಡಗೋಡ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರುತಿ ಅಡಿವೆಪ್ಪ ಮುಡಸಾಲಿ ಎಂಬ ಆರೋಪಿಯನ್ನು ಬಂಧಿಸಿದ್ದು, ಕೊಲೆಯಾದ ಮಹಿಳೆಯ ಚಿನ್ನಾಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್‌ನ್ನು ವಶಪಡಿಸಿಕೊಂಡಿದ್ದಾರೆ.

ತಾಲೂಕಿನ ಗ್ರಾಮವೊಂದರಲ್ಲಿ ವಾಸವಾಗಿದ್ದ ಕಮಲವ್ವ (75) ಎಂಬ ವೃದ್ಧ ಮಹಿಳೆಯನ್ನು ಅಕ್ಟೋಬರ್ 25ರ ರಾತ್ರಿ 8:34ರಿಂದ ಅಕ್ಟೋಬರ್ 26ರ ಬೆಳಗ್ಗೆ 6:30ರ ನಡುವಿನ ಅವಧಿಯಲ್ಲಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 246/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 103(1)ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದರು. ಸತತ ತನಿಖೆಯ ಬಳಿಕ ನವೆಂಬರ್ 13ರಂದು ಆರೋಪಿ ಮಾರುತಿ ಅಡಿವೆಪ್ಪ ಮುಡಸಾಲಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ಹಾಗೂ ತನಿಖೆಯ ವೇಳೆ ವೃದ್ಧ ಮಹಿಳೆಯ ಚಿನ್ನಾಭರಣಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಐಪಿಎಸ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ ಅವರ ನಿರ್ದೇಶನದಂತೆ ಕಾರ್ಯಾಚರಣೆ ನಡೆಸಲಾಯಿತು.

ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಮೇಶ್ ಹೆಚ್. ಹಾನಾಪುರ ಅವರ ನೇತೃತ್ವದಲ್ಲಿ ಪಿಎಸ್ಐ ಗಣೇಶ, ಮಂಜುನಾಥ ಗೌಡರ, ರವೀಂದ್ರ ಬಿರಾದಾರ ಹಾಗೂ ನಿಂಗರಾಜ ಕರಡಿಗುಡ್ಡಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಶಿರಸಿ ಉಪವಿಭಾಗದ ಅಪರಾಧ ವಿಭಾಗದ ಸಿಬ್ಬಂದಿಗಳಾದ ಬಸವರಾಜ ಹಗರಿ ಮತ್ತು ಕೋಟೇಶ್ವರ ನಾಗರಹಳ್ಳಿ ಹಾಗೂ ಮುಂಡಗೋಡ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಬಸವರಾಜ ಮಾವಗೇರಿ, ಅಣ್ಣಪ್ಪ ಬಡಗೇರಿ, ತಿರುಪತಿ ಚೌಡಣ್ಣನವರ ಮತ್ತು ಬಸವರಾಜ ಮಾಳಕಪ್ಪನವರ ಕಾರ್ಯಾಚರಣೆಗೆ ಸಹಕರಿಸಿದ್ದರು.

ಪೊಲೀಸ್ ತಂಡಕ್ಕೆ ಮೆಚ್ಚುಗೆ

75 ವರ್ಷದ ವೃದ್ಧ ಮಹಿಳೆಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವುದರ ಜೊತೆಗೆ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್‌ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯಕ್ಕೆ ಪೊಲೀಸ್ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದೆ.

Related News

error: Content is protected !!