ಬೆಂಗಳೂರು ನಗರದಲ್ಲಿ ಮತ್ತೊಂದು ಮನಕಲಕುವ ಘಟನೆ ಬೆಳಕಿಗೆ ಬಂದಿದ್ದು, 11 ವರ್ಷದ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಹಾರ ಮೂಲದ ಮೊಹಮ್ಮದ್ ಮುನ್ನ (28) ಎಂಬಾತನೇ ಈ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಆರೋಪಿಯು ಸ್ಥಳೀಯವಾಗಿ ವಾಸವಾಗಿದ್ದು, ನಿನ್ನೆ ಸಂಜೆ ಮನೆಯ ಸಮೀಪ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಸಮೀಪದಲ್ಲಿದ್ದ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಬಾಲಕಿಯ ಮೇಲೆ ದೌರ್ಜನ್ಯ ಎಸಗಿರುವುದು ತಿಳಿದುಬಂದಿದೆ. ನಂತರ ಬಾಲಕಿಗೆ ಹಣ ನೀಡಿ ಅಲ್ಲಿಂದ ಕಳುಹಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬೆಳಕಿಗೆ ಬಂದಿದ್ದು ಹೇಗೆ?
ಕೆಲ ಸಮಯದವರೆಗೆ ಮಗಳು ಮನೆಗೆ ಮರಳದ ಹಿನ್ನೆಲೆ ಆತಂಕಗೊಂಡ ಪೋಷಕರು ಹುಡುಕಾಟ ಆರಂಭಿಸಿದರು. ನಂತರ ಮನೆಗೆ ಬಂದ ಬಾಲಕಿಯ ವರ್ತನೆ ಹಾಗೂ ಕೈಯಲ್ಲಿದ್ದ ಹಣದಿಂದ ಅನುಮಾನಗೊಂಡ ಅವರು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ತಕ್ಷಣವೇ ಪೋಷಕರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಈ ಘಟನೆ ನಗರದ ಭದ್ರತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದ್ದು, ವಿಶೇಷವಾಗಿ ಮಕ್ಕಳ ಸುರಕ್ಷತೆ ಕುರಿತಾಗಿ ಪೋಷಕರಲ್ಲಿ ಆತಂಕ ಹೆಚ್ಚಿಸಿದೆ. ಪೊಲೀಸರು ಸಾರ್ವಜನಿಕರಿಗೆ ಜಾಗ್ರತೆ ವಹಿಸುವಂತೆ ಮನವಿ ಮಾಡಿದ್ದಾರೆ.
