ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರ ಪ್ರದೇಶದ ಸತ್ಯಸಾಯಿ ಜಿಲ್ಲೆಯ ಧನಂಜಯ ರೆಡ್ಡಿ (33) ಎಂದು ಗುರುತಿಸಲಾಗಿದೆ.
ಚಿತ್ರದುರ್ಗದ ಪ್ರಶಾಂತ್ ನಗರ ನಿವಾಸಿ ತಿಪ್ಪೇಸ್ವಾಮಿ ಅವರು ಶಿವಮೊಗ್ಗ ಲೋಕೋಪಯೋಗಿ ಇಲಾಖೆಯ ವಿದ್ಯುತ್ ಉಪ ವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಧನಂಜಯ ರೆಡ್ಡಿ ಅವರು ತಿಪ್ಪೇಸ್ವಾಮಿ ಅವರಿಗೆ ವಾಟ್ಸ್ಆ್ಯಪ್ ಕರೆ ಮಾಡಿ, ತಾನು ಬೆಂಗಳೂರು ಲೋಕಾಯುಕ್ತ ಕಚೇರಿಯ ಅಧಿಕಾರಿಯೆಂದು ಪರಿಚಯಿಸಿಕೊಂಡಿದ್ದಾನೆ.
ಇದೇ ವೇಳೆ, “ನಿಮ್ಮ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದಿಂದ ನಿಮ್ಮನ್ನು ಮುಕ್ತಗೊಳಿಸಲು ಹಾಗೂ ಬಿ-ರಿಪೋರ್ಟ್ ಸಲ್ಲಿಸಲು ಹಣ ನೀಡಬೇಕು” ಎಂದು ಆರೋಪಿಯು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ.
ಈ ಕುರಿತು ತಿಪ್ಪೇಸ್ವಾಮಿ ಅವರು ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, 66(D) ಐಟಿ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ (BNS) 308(7) ಮತ್ತು 204 ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆ ಕೈಗೊಂಡ ಸಿಇಎನ್ ಪೊಲೀಸ್ ಠಾಣೆಯ ನಿರೀಕ್ಷಕ ಮಂಜುನಾಥ್ ನೇತೃತ್ವದ ತಂಡ, ಎಎಸ್‌ಐ ಕಿರಣ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಸಂಗಮೇಶ್ ಮತ್ತು ಶರತ್ ಕುಮಾರ್ ಅವರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಆಂಧ್ರ ಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣವನ್ನು ಶೀಘ್ರವಾಗಿ ಭೇದಿಸಿದ ಸಿಇಎನ್ ಪೊಲೀಸ್ ತಂಡವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅಭಿನಂದಿಸಿದ್ದಾರೆ.
