ವಿದ್ಯಾನಗರದ ಬನಶಂಕರಿ ಬಡಾವಣೆಯ ಸಿದ್ದೇಶ್ವರ ಪಾರ್ಕ್ ಬಳಿ ಘಟನೆ; ಮೂವರು ಆರೋಪಿಗಳಿಗಾಗಿ ಪೊಲೀಸರ ಶೋಧ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆಗೈದಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ನಗರದ ವಿದ್ಯಾನಗರದ ಬನಶಂಕರಿ ಬಡಾವಣೆಯ ಸಿದ್ದೇಶ್ವರ ಪಾರ್ಕ್ ಸಮೀಪ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ದಾದಾಪೀರ್ ಎಂದು ಗುರುತಿಸಲಾಗಿದೆ.

ಮಾಹಿತಿ ಪ್ರಕಾರ, ದಾದಾಪೀರ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಮೂವರು ದುಷ್ಕರ್ಮಿಗಳು ಆತನನ್ನು ರಸ್ತೆಯಲ್ಲಿ ಅಡ್ಡಗಟ್ಟಿದ್ದಾರೆ. ಬಳಿಕ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದಾರೆ ಎನ್ನಲಾಗಿದೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಕ್ಷಣಾರ್ಧದಲ್ಲೇ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯಾನಗರ ಠಾಣೆಯ ಪೊಲೀಸರು ಕೂಡ ಸ್ಥಳಕ್ಕೆ ಧಾವಿಸಿ, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

ಕೊಲೆ ನಡೆದಿರುವ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸರು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದ್ದು, ಕೃತ್ಯಕ್ಕೆ ಬಳಸಿರುವ ಮಾರಕಾಸ್ತ್ರಗಳು ಹಾಗೂ ಆರೋಪಿಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

ದಾದಾಪೀರ್ ಅವರನ್ನು ಯಾರು ಕೊಲೆ ಮಾಡಿದರು? ಕೊಲೆಗೆ ನಿಖರ ಕಾರಣವೇನು? ಎಂಬ ಪ್ರಶ್ನೆಗಳಿಗೆ ಸದ್ಯ ಉತ್ತರ ಸಿಕ್ಕಿಲ್ಲ. ವೈಯಕ್ತಿಕ ದ್ವೇಷ, ಹಳೆಯ ವೈಷಮ್ಯ ಸೇರಿದಂತೆ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿರುವ ಸಾಧ್ಯತೆ ಇದೆ.

ಮೂವರು ದುಷ್ಕರ್ಮಿಗಳ ಪತ್ತೆಗೆ ಪೊಲೀಸ್ ತಂಡಗಳು ಕಾರ್ಯಾಚರಣೆ ಆರಂಭಿಸಿದ್ದು, ಸಿಸಿಟಿವಿ ದೃಶ್ಯಗಳು ಹಾಗೂ ಇತರ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಶೀಘ್ರ ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ವರದಿ: ಶಿವು. ಪಿ.ಆರ್.

Related News

error: Content is protected !!