ಬೆಂಗಳೂರು: ಮದ್ಯಪಾನ ಮಾಡಿ ಕಾರು ಚಲಾಯಿಸುವಾಗ ಮನೆಯೊಂದರ ಗೋಡೆಗೆ ಡಿಕ್ಕಿ ಹೊಡೆದು, ಸ್ಥಳಕ್ಕೆ ಬಂದ ಸಂಚಾರಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ಗೇ ಕಪಾಳಮೋಕ್ಷ ಮಾಡಿದ ಕಾರು ಬ್ರೋಕರ್‌ನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಂಡ್ಯ ಮೂಲದ ಸಚಿನ್ ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ಪೊಲೀಸ್ ಅಧಿಕಾರಿಯನ್ನು ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯ ಎಸ್‌ಐ ಕೃಷ್ಣ ಎಂದು ತಿಳಿದುಬಂದಿದೆ.

ಸಚಿನ್ ಮದ್ಯದ ಅಮಲಿನಲ್ಲಿ ಕಾರು ಚಲಾಯಿಸುತ್ತಿದ್ದ ವೇಳೆ ಮನೆಯೊಂದರ ಗೋಡೆಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಆತಂಕಗೊಂಡ ಮನೆ ಮಾಲೀಕರು ತಕ್ಷಣ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರೊಂದಿಗೆ ಸಚಿನ್ ವಾಗ್ವಾದ ನಡೆಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಬಳಿಕ ಸ್ಥಳಕ್ಕೆ ಬಂದ ಎಸ್‌ಐ ಕೃಷ್ಣ ಅವರು ಅಪಘಾತದ ಕುರಿತು ವಿಚಾರಣೆ ನಡೆಸುತ್ತಿದ್ದ ವೇಳೆ, ಮದ್ಯದ ಅಮಲಿನಲ್ಲಿದ್ದ ಸಚಿನ್ ಏಕಾಏಕಿ ಅವರ ಮೇಲೆ ಹಲ್ಲೆ ನಡೆಸಿ ಕಪಾಳಮೋಕ್ಷ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ಬಂಧನ

ಘಟನೆಗೆ ಸಂಬಂಧಿಸಿದಂತೆ ಸಚಿನ್ ವಿರುದ್ಧ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಕುರಿತು ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಸಚಿನ್‌ನನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಿ ಅಪಘಾತ ಉಂಟುಮಾಡಿದ್ದಲ್ಲದೆ, ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Related News

error: Content is protected !!