ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಬಲದೇವ್ ಪೊಲೀಸ್ ಠಾಣೆ ವ್ಯಾಪ್ತಿಯ ಚೌಲಿ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಮೂರು ವರ್ಷದ ಮಗನನ್ನು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಆರೋಪದಡಿ ಮಹಿಳೆಯೊಬ್ಬಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಜೂನ್ 28ರಂದು ಈ ಘಟನೆ ನಡೆದಿದ್ದು, ಮೃತಪಟ್ಟ ಬಾಲಕನನ್ನು ಮಾಧವ್ ಎಂದು ಗುರುತಿಸಲಾಗಿದೆ. ಆರೋಪಿಯಾಗಿರುವ ರೂಚಿ ಗುಪ್ತಾ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ವೇಳೆ ಮಗು ಅಳುತ್ತಿದ್ದುದರಿಂದ ಆಕ್ರೋಶಗೊಂಡು ಕುತ್ತಿಗೆ ಒತ್ತಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಘಟನೆಯ ಬಳಿಕ ಮಗು ಎಚ್ಚರವಾಗುತ್ತಿಲ್ಲ ಎಂದು ಪತಿಗೆ ತಿಳಿಸಿದ್ದು, ಆತ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದರು. ಸಾವಿನ ಹಿಂದಿನ ನಿಜಾಂಶ ತಿಳಿಯದ ಕುಟುಂಬಸ್ಥರು ಮಗುವಿನ ಅಂತ್ಯಕ್ರಿಯೆಯನ್ನೂ ನೆರವೇರಿಸಿದ್ದರು.
ಘಟನೆ ನಡೆದ ಸುಮಾರು ಒಂದು ತಿಂಗಳ ಬಳಿಕ, ಮಗುವಿನ ಸಾವಿಗೆ ತಾನೇ ಕಾರಣ ಎಂದು ರೂಚಿ ಗುಪ್ತಾ ತನ್ನ ಪತಿಗೆ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಕುಟುಂಬದವರು ಜುಲೈ 27ರಂದು ಡಯಲ್-112ಗೆ ಕರೆ ಮಾಡಿ ದೂರು ನೀಡಿದ್ದು, ಲಿಖಿತ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಪ್ರಕರಣದ ಎಲ್ಲಾ ಆಯಾಮಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಮಗುವಿನ ಸಾವು ಉದ್ದೇಶಪೂರ್ವಕ ಹತ್ಯೆಯೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬುದನ್ನು ತನಿಖೆಯ ಮೂಲಕ ದೃಢಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
