ಪಿಥೋರಗಢ (ಉತ್ತರಾಖಂಡ): ಉತ್ತರಾಖಂಡದ ಪಿಥೋರಗಢ ಜಿಲ್ಲೆಯ ಮುವಾನಿ ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದುರಂತ ಘಟನೆ ಬೆಳಕಿಗೆ ಬಂದಿದೆ.
ಘಟನೆ ಮುವಾನಿಯ ಭಂಡಾರಿ ಗ್ರಾಮದ ಸಮೀಪದಲ್ಲಿರುವ ಸೋನಿ ಸೇತುವೆ ಬಳಿ ನಡೆದಿದೆ. 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ನುಣುಪಾದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಸುಮಾರು 150 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ.
ಘಟನೆಯ ತೀವ್ರತೆಗೆ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪಿಥೋರಗಢ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರೇಖಾ ಯಾದವ್ ತಿಳಿಸಿದ್ದಾರೆ. ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಸಂಭವಿಸಿದ ತಕ್ಷಣವೇ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಮೇಲ್ನೋಟದಲ್ಲಿ ಅತಿಯಾದ ವೇಗ ಅಥವಾ ದಾರಿಯ ಕುಸಿತ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಸ್ಥಳದಲ್ಲಿ ತೀವ್ರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಸ್ಥಳೀಯರು ಸಹ ಪಾಲ್ಗೊಂಡಿದ್ದಾರೆ.
