ಕಲಬುರಗಿ ನಗರದ ಹಳೇ ಜೇವರ್ಗಿ ರಸ್ತೆಯ ಪಿ & ಟಿ ಕಾಲೊನಿಯಲ್ಲಿ ಗುರುವಾರ ರಾತ್ರಿ ನಡೆದ ಭೀಕರ ಘಟನೆಯಲ್ಲಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ.
ಅನಿಲ ವಿಠ್ಠಲ ರಾಠೋಡ (45) ಮೃತ ವ್ಯಕ್ತಿಯಾಗಿದ್ದು, ರುದ್ರವಾಡಿ ಆಸ್ಪತ್ರೆ ಎದುರಿನ ವೆಂಕಟೇಶ್ವರ ಕಾಂಪ್ಲೆಕ್ಸ್ನಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಮೂವರು ಅನಾಮಿಕರು ಆಟೊದಲ್ಲಿ ಬಂದು, ಅನಿಲ ಅವರು ಫೈನಾನ್ಸ್ ಕೆಲಸದಲ್ಲಿ ನಿರತರಾಗಿದ್ದ ವೇಳೆ ದಿಢೀರ್ ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕ್ರೂರವಾಗಿ ಕೊಲೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಅನಿಲ ರಾಠೋಡ ಅವರು ವಕೀಲಿಕೆ ಶಿಕ್ಷಣ ಪಡೆದಿದ್ದು, ನಂತರ ಫೈನಾನ್ಸ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು. ಅವರು ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರ ಅಳಿಯನಾಗಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ., ಡಿಸಿಪಿ ಪ್ರವೀಣ ನಾಯಕ, ಎಸಿಪಿ ಶರಣಬಸಪ್ಪ ಸುಬೇದಾರ ಹಾಗೂ ಸ್ಟೇಷನ್ ಬಜಾರ್ ಇನ್ಸ್ಪೆಕ್ಟರ್ ಗುರು ಪಾಟೀಲ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಾಥಮಿಕ ತನಿಖೆಯ ಪ್ರಕಾರ, ಮೃತನ ಪರಿಚಯಸ್ಥರೇ ಈ ಕೃತ್ಯದಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಹಣಕಾಸಿನ ವ್ಯವಹಾರ ಸಂಬಂಧಿತ ವೈಮನಸ್ಸೇ ಹತ್ಯೆಗೆ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಗಣಿಸಿ ತನಿಖೆ ಮುಂದುವರಿಸಲಾಗುತ್ತಿದ್ದು, ಆರೋಪಿಗಳ ಬಂಧನಕ್ಕಾಗಿ ಎಸಿಪಿಗಳ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
