ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ‘ಮುರಸು’ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ನೆಲ್ಲೂರು ಮತ್ತು ನರಸಾಪುರ ನಡುವಿನ ಒಂಗೋಲ್ ಸಮೀಪ ಚಂಡಮಾರುತ ಭೂಸ್ಪರ್ಶ ಮಾಡುವ ಸಾಧ್ಯತೆಯಿದ್ದು, ಈ ವೇಳೆ ಗಂಟೆಗೆ 100ರಿಂದ 150 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದೆ.

ಚಂಡಮಾರುತದ ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇನ್ನು ಮುರಸು ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 2ರಿಂದ 6ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಅವರ ಮಾಹಿತಿ ಪ್ರಕಾರ, ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಚಂಡಮಾರುತದ ಪ್ರಭಾವ ಕೊಂಚ ಕಡಿಮೆಯಿರಲಿದೆ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನವೆಂಬರ್ 3ರಿಂದ 5ರವರೆಗೆ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.

ಚಂಡಮಾರುತದ ಪರಿಣಾಮ ಹವಾಮಾನದಲ್ಲಿ ಏರುಪೇರಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅನಗತ್ಯವಾಗಿ ಹೊರಗೆ ಸಂಚರಿಸುವುದನ್ನು ತಪ್ಪಿಸುವುದು ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನಿಸುವುದು ಅಗತ್ಯವಾಗಿದೆ.

Related News

error: Content is protected !!