ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದ ಮನನೊಂದ ಅರ್ಚಕನೊಬ್ಬ ತನ್ನ ಇಬ್ಬರು ಚಿಕ್ಕ ಮಕ್ಕಳನ್ನು ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಳಕಿಗೆ ಬಂದಿದೆ.
ಗ್ರಾಮದ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಅರ್ಚಕರಾಗಿದ್ದ ಶಿವಣ್ಣ (40) ಅವರು ತಮ್ಮ ಪುತ್ರರಾದ ಜೀವನ್ (10) ಹಾಗೂ ಪ್ರಾಣೇಶ್ (5) ಅವರನ್ನು ಕತ್ತು ಹಿಸುಕಿ ಕೊಲೆ ಮಾಡಿ, ನಂತರ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾಹಿತಿಯ ಪ್ರಕಾರ, ಶಿವಣ್ಣ ಹಾಗೂ ಅವರ ಪತ್ನಿ ಮಂಜುಳಾ ಅವರ ನಡುವೆ ಕಳೆದ ಕೆಲವು ದಿನಗಳಿಂದ ತೀವ್ರ ಕೌಟುಂಬಿಕ ಕಲಹ ನಡೆಯುತ್ತಿತ್ತು. ಈ ಜಗಳದ ಹಿನ್ನೆಲೆ ಪತ್ನಿ ಮನೆ ತೊರೆದಿದ್ದು, ಇದರಿಂದ ಮನನೊಂದ ಶಿವಣ್ಣ ಈ ಕಠಿಣ ನಿರ್ಧಾರಕ್ಕೆ ಕೈ ಹಾಕಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
