ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40) ದಾರುಣವಾಗಿ ಮೃತಪಟ್ಟಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆನೆಕಾಡು ಸಮೀಪ ಈ ದುರ್ಘಟನೆ ನಡೆದಿದೆ. ನಿನ್ನೆ ಕೆಲಸ ಮುಗಿಸಿಕೊಂಡು ಕುಶಾಲನಗರದಿಂದ ತಮ್ಮ ಸ್ವಗ್ರಾಮ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದ ಹರೀಶ್ ಅವರು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್ಗೆ ವೇಗವಾಗಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಹರೀಶ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಹರೀಶ್ ಅವರು ಹಲವು ಕನ್ನಡ ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ಅಭಿನಯಿಸಿದ್ದು, ಜೊತೆಗೆ ಹಲವು ಜನಪ್ರಿಯ ಕಿರುತೆರೆ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡು ತಮ್ಮದೇ ಆದ ಗುರುತು ಮೂಡಿಸಿದ್ದರು.
ಅಪಘಾತದ ಮಾಹಿತಿ ತಿಳಿದ ತಕ್ಷಣ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಲಾಗಿದೆ.
