
ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಹುಬ್ಬಳ್ಳಿಯಿಂದ ವಿಜಯಪುರದ ಕಡೆಗೆ ಸಂಚರಿಸುತ್ತಿದ್ದ ಕಾರಿಗೆ ಎದುರಿನಿಂದ ಬಂದ ಕ್ಯಾಂಟರ್ ವಾಹನ ಬಲವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಾಲ್ವರು ಸಾವು
ಮೃತರನ್ನು 32 ವರ್ಷದ ಅಜಿತ್, 33 ವರ್ಷದ ಸಂದೀಪ್, 28 ವರ್ಷದ ಶ್ರುತಿ ಹಾಗೂ 22 ವರ್ಷದ ರಾಕೇಶ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ವರೂ ಪ್ರಾಣ ಕಳೆದುಕೊಂಡಿದ್ದು, ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮತ್ತು ದುಃಖ ಆವರಿಸಿದೆ.
ಸ್ಥಳಕ್ಕೆ ಪೊಲೀಸರ ಭೇಟಿ
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ನವಲಗುಂದ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ಅಪಘಾತಕ್ಕೆ ನಿಖರವಾದ ಕಾರಣವೇನು ಎಂಬುದರ ಕುರಿತು ತನಿಖೆ ಕೈಗೊಂಡಿದ್ದಾರೆ.
ಈ ಸಂಬಂಧ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಶಿವು. ಪಿ.ಆರ್.






