ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಜೀವ ದಹನಗೊಂಡು ಮೃತಪಟ್ಟ ದಾರುಣ ಘಟನೆ ನಡೆದಿದೆ. ಕಾರು ಮತ್ತು ಖಾಸಗಿ ಬಸ್ ನಡುವಿನ ಮುಖಾಮುಖಿ ಡಿಕ್ಕಿಯಿಂದ ಈ ದುರ್ಘಟನೆ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ.
ಅಪಘಾತದ ಭೀಕರತೆ ಎಷ್ಟಿತ್ತೆಂದರೆ, ಕಾರಿನೊಳಗೆ ಸಿಲುಕಿದ್ದವರನ್ನು ರಕ್ಷಿಸಲು ಸಾಧ್ಯವಾಗದೇ, ಅವರು ಜೀವಂತವಾಗಿಯೇ ಬೆಂಕಿಯಲ್ಲಿ ಕರಕಲಾಗಿದ್ದಾರೆ. ಮೃತದೇಹಗಳು ಸಂಪೂರ್ಣವಾಗಿ ಸುಟ್ಟುಹೋಗಿರುವುದರಿಂದ ಗುರುತಿಸುವುದು ಕಷ್ಟಕರವಾಗಿದ್ದು, ಘಟನೆಯ ದಾರುಣತೆ ಸ್ಥಳದಲ್ಲೇ ಗೋಚರಿಸಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಏಸಿ ಬಸ್ ಮತ್ತು ಯಾದಗಿರಿಯಿಂದ ರಾಯಚೂರಿನ ಲಿಂಗಸೂಗೂರು ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ನಡೆದಿದೆ. ಡಿಕ್ಕಿಯ ಹೊಡೆತಕ್ಕೆ ಕಾರಿನ ಬಾಗಿಲುಗಳು ಲಾಕ್ ಆಗಿ ತೆರೆಯದೇ, ಒಳಗಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೇ ಬೆಂಕಿಗೆ ಆಹುತಿಯಾಗಿದ್ದಾರೆ.
ಬಸ್ನಲ್ಲಿದ್ದ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ಕೆಲವರಿಗೆ ಗಾಯಗಳಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಬಸ್ಗೂ ಬೆಂಕಿ ವ್ಯಾಪಿಸಿಕೊಂಡಿದ್ದು, ಆತಂಕದ ವಾತಾವರಣ ನಿರ್ಮಾಣವಾಯಿತು.
ಘಟನೆ ತಿಳಿದು ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾದರೂ, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದ್ದರಿಂದ ಒಳಗಿದ್ದವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿ ನಂದಿಸಿದ ಬಳಿಕ ಮೃತದೇಹಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಆರಂಭಿಸಲಾಗಿದೆ.
ಸುರಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ನಿಖರ ಕಾರಣ ತಿಳಿದುಕೊಳ್ಳಲು ತನಿಖೆ ಮುಂದುವರಿದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಈ ದುರಂತದಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರಾಜ್ಯದಲ್ಲಿ ಮತ್ತೆ ರಸ್ತೆ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ.
