
ಹೈದರಾಬಾದ್: ದೇವಾಲಯಕ್ಕೆ ಬರುತ್ತಿದ್ದ ಅಪ್ರಾಪ್ತ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕೃತ್ಯಕ್ಕೆ ಯತ್ನಿಸಿದ ಆರೋಪದ ಮೇಲೆ ಪೂಜಾರಿಯೊಬ್ಬನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಘಟನೆ ಹೈದರಾಬಾದ್‌ನ ರಾಮಚಂದ್ರಪುರಂ ಮಾರುಕಟ್ಟೆ ಸಮೀಪ ನಡೆದಿದೆ.
ಆರೋಪಿಯಾಗಿರುವ ಪೂಜಾರಿ ಸಾಯಿಲು ಹಲವು ದಿನಗಳಿಂದ ದೇವಾಲಯಕ್ಕೆ ಬರುತ್ತಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಅನುಮಾನಾಸ್ಪದವಾಗಿ ಗಮನಹರಿಸುತ್ತಿದ್ದ ಎನ್ನಲಾಗಿದೆ. ಆತನ ವರ್ತನೆಯ ಬಗ್ಗೆ ಅನುಮಾನಗೊಂಡ ಸ್ಥಳೀಯ ಯುವಕರು ಆತನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು.
ಈ ನಡುವೆ, ಸಾಯಿಲು ಅಪ್ರಾಪ್ತ ಬಾಲಕಿಯೊಬ್ಬಳನ್ನು ದೇವಸ್ಥಾನದ ಒಳಗೆ ಕರೆದುಕೊಂಡು ಹೋಗಿ ಬಾಗಿಲು ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯ ಯುವಕರು ಕೂಡಲೇ ಸ್ಥಳಕ್ಕೆ ತೆರಳಿ ಬಾಗಿಲು ತೆರೆದು ಒಳಗೆ ಪ್ರವೇಶಿಸಿದ್ದಾರೆ. ಈ ವೇಳೆ ಪೂಜಾರಿಯ ವರ್ತನೆ ಕಂಡು ಸ್ಥಳೀಯರು ಆಕ್ರೋಶಗೊಂಡಿದ್ದಾರೆ.
ಘಟನೆಯನ್ನು ಕೆಲವರು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದು, ಬಳಿಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಘಟನೆ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ವಿಚಾರಣೆ ನಡೆಸಿದ್ದಾರೆ.
ಅಪ್ರಾಪ್ತ ಬಾಲಕಿಯ ಹೇಳಿಕೆ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ದೇವಾಲಯದಂತಹ ಪವಿತ್ರ ಸ್ಥಳದಲ್ಲಿ ಇಂತಹ ಆರೋಪ ಕೇಳಿಬಂದಿರುವುದು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.






