ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದನೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳವಾರ ಮುಂಜಾನೆ ಭಾರಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮೂವರು ಹಿರಿಯ ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಒಟ್ಟು 14 ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳು ಹಾಗೂ ಆಸ್ತಿ ವಿವರಗಳನ್ನು ಪರಿಶೀಲಿಸಲಾಗಿದೆ.

ಲೋಕಾಯುಕ್ತ ಅಧಿಕಾರಿಗಳ ತಂಡವು ಎಪಿಎಂಸಿ (ಕೃಷಿ ಇಲಾಖೆ) ಹೆಚ್ಚುವರಿ ನಿರ್ದೇಶಕಿ ಪುಷ್ಪ ಡಿ.ಆರ್., ಕೆಆರ್‌ಐಡಿಎಲ್‌ನ ಸೂಪರಿಂಟೆಂಡಿಂಗ್ ಇಂಜಿನಿಯರ್ ಪ್ರವೀಣ್ ಶ್ರೀಹರಿ ಹಾಗೂ ಸಾರ್ವಜನಿಕ ಕಾಮಗಾರಿ ಇಲಾಖೆ (PWD) ಕಾರ್ಯನಿರ್ವಾಹಕ ಇಂಜಿನಿಯರ್ ನರೇಂದ್ರ ಅವರಿಗೆ ಸಂಬಂಧಿಸಿದ ನಿವಾಸಗಳು ಮತ್ತು ಕಚೇರಿಗಳಲ್ಲಿ ಶೋಧ ನಡೆಸಿತು. ಈ ಕಾರ್ಯಾಚರಣೆಯಲ್ಲಿ 20ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಪ್ರಾಥಮಿಕ ಮಾಹಿತಿಯಂತೆ, ಎಪಿಎಂಸಿ ಹೆಚ್ಚುವರಿ ನಿರ್ದೇಶಕಿ ಪುಷ್ಪ ಅವರ ನಿವಾಸದಲ್ಲಿ ಚಿನ್ನಾಭರಣ ಸೇರಿದಂತೆ ಮೌಲ್ಯಯುತ ವಸ್ತುಗಳು ಪತ್ತೆಯಾಗಿವೆ. ದಾಳಿಯಲ್ಲಿ ವಶಪಡಿಸಿಕೊಂಡ ದಾಖಲೆಗಳು, ಆಸ್ತಿ-ಪಾಸ್ತಿ ಹಾಗೂ ಇತರ ವಸ್ತುಗಳ ಮೌಲ್ಯಮಾಪನ ಕಾರ್ಯ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆಯಿದೆ.

Related News

error: Content is protected !!