ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ಗುಡುಮಘಟ್ಟ ಗ್ರಾಮದಲ್ಲಿ ಆಸ್ತಿ ವಿವಾದದಿಂದ ಕಿರುಕುಳಕ್ಕೆ ಒಳಗಾಗಿ ಜೀವ ತ್ಯಜಿಸಿದ ವ್ಯಕ್ತಿಯ ಆತ್ಮಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗಿದೆ.
ಮೃತ ಮಂಜಪ್ಪ (40) ಅವರ ಆತ್ಮಹತ್ಯೆಗೆ ಕಾರಣರಾದ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಯ ರಂಗಪ್ಪ, ಹನುಮಂತಪ್ಪ ಹಾಗೂ ಕಲೀ ರಂಗಪ್ಪ ಎಂಬುವವರಿಗೆ ತಲಾ 10 ವರ್ಷಗಳ ಕಠಿಣ ಕಾರಾಗೃಹ ಮತ್ತು ₹2 ಲಕ್ಷ ದಂಡ ವಿಧಿಸುವಂತೆ ಭದ್ರಾವತಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.
2018ರ ಜನವರಿ 31ರಂದು, ಆಸ್ತಿ ವಿಚಾರದಲ್ಲಿ ನಡೆಯುತ್ತಿದ್ದ ನಿರಂತರ ಕಿರುಕುಳದಿಂದ ಬೇಸತ್ತ ಮಂಜಪ್ಪ ಕ್ರಿಮಿನಾಶಕ ಸೇವಿಸಿ ಮೃತಪಟ್ಟಿದ್ದರು. ಈ ಸಂಬಂಧ ಮೃತರ ಪತ್ನಿ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ತನಿಖೆ ನಡೆಸಿದ ಪೊಲೀಸರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆಯಲ್ಲಿ ಸಾಕ್ಷ್ಯಾಧಾರಗಳು ಸ್ಪಷ್ಟವಾದ ಹಿನ್ನೆಲೆಯಲ್ಲಿ, ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಆರೋಪಿಗಳಿಗೆ ಶಿಕ್ಷೆ ವಿಧಿಸಿದರು. ಸರ್ಕಾರಿ ವಕೀಲ ಪಿ. ರತ್ನಮ್ಮ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದರು.
