ಬೆಂಗಳೂರು, ಜೂನ್ 18: ರಾಜ್ಯ ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಬದಲಾವಣೆ ಕೈಗೊಂಡಿದ್ದು, ಒಟ್ಟು 14 ಮಂದಿ ಐಎಎಸ್‌ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್‌) ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಈ ಸಂಬಂಧ ಅಧಿಕೃತ ಆದೇಶ ಪ್ರಕಟಿಸಿದ್ದಾರೆ.

ಈ ವರ್ಗಾವಣೆಯಲ್ಲಿ ಪ್ರಮುಖ ಇಲಾಖೆಗಳ ಕಾರ್ಯದರ್ಶಿಗಳು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ವಿವಿಧ ನಿಗಮ-ಮಂಡಳಿಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳ ಜವಾಬ್ದಾರಿಗಳಲ್ಲಿ ಬದಲಾವಣೆ ಮಾಡಲಾಗಿದೆ. ಕೆಲ ಅಧಿಕಾರಿಗಳಿಗೆ ಹೆಚ್ಚುವರಿ ಪ್ರಭಾರವನ್ನೂ ವಹಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕಾರ್ಯದರ್ಶಿಯಾಗಿದ್ದ ಸಮೀರ್‌ ಶುಕ್ಲಾ ಅವರನ್ನು ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಅವರ ಸ್ಥಾನಕ್ಕೆ ಆರ್‌. ದೀಪ್‌ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದ್ದು, ಪಂಚಾಯತ್‌ ರಾಜ್‌ ಇಲಾಖೆಯ ಹೆಚ್ಚುವರಿ ಪ್ರಭಾರವನ್ನೂ ನೀಡಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ತುಳಸಿ ಮದ್ದಿನೇನಿ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಇತ್ತ, ಡಾ. ಪ್ರಸಾದ್‌ ಎನ್‌.ವಿ. ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಕರ್ನಾಟಕ ಭವನದ ನಿವಾಸಿ ಆಯುಕ್ತರಾಗಿದ್ದ ಇಮ್ಕೊಂಗ್ಲಾ ಜಮೀರ್‌ ಎಂ. ಅವರನ್ನು ಅದೇ ಭವನದ ಸಮನ್ವಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಕುಮಾರ್‌ ಕೆ.ಬಿ. ಅವರನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಖಜಾನೆ ಇಲಾಖೆಯ ಆಯುಕ್ತರಾಗಿದ್ದ ರಘುನಂದನ್‌ ಮೂರ್ತಿ ಅವರನ್ನು ಬಿಎಂಟಿಸಿ ನೂತನ ಎಂಡಿಯಾಗಿ ನೇಮಿಸಲಾಗಿದ್ದು, ಖಜಾನೆ ಇಲಾಖೆಯ ಹೆಚ್ಚುವರಿ ಜವಾಬ್ದಾರಿಯನ್ನೂ ಮುಂದುವರಿಸಲಾಗಿದೆ.

ಎಂಎಸ್‌ಎಂಇ ನಿರ್ದೇಶಕರಾಗಿದ್ದ ಡಾ. ಸತೀಶ್‌ ಬಿ.ಸಿ. ಅವರನ್ನು ಕೃಷಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಜ್ಞಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಎಂಎಸ್‌ಎಂಇ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ವೇಟಿಂಗ್‌ ಪಟ್ಟಿಯಲ್ಲಿದ್ದ ಅಕ್ರಮ್‌ ಪಾಷಾ ಅವರಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಮಿಷನ್‌ ನಿರ್ದೇಶಕರ ಜವಾಬ್ದಾರಿ ನೀಡಲಾಗಿದೆ. ನಿತೀಶ್‌ ಕೆ. ಅವರನ್ನು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಹಾಗೂ ಬೃಹತ್‌ ಬೆಂಗಳೂರು ಪ್ರಾಧಿಕಾರದ ಆರೋಗ್ಯ ಮತ್ತು ಶಿಕ್ಷಣ ವಿಭಾಗದ ವಿಶೇಷ ಆಯುಕ್ತರಾಗಿ ನೇಮಕ ಮಾಡಿ ದ್ವಿಪಾತ್ರ ಜವಾಬ್ದಾರಿ ನೀಡಲಾಗಿದೆ.

ಐಎಎಸ್‌ ಅಧಿಕಾರಿ ಗಜಾನನ ಬಾಲೆ ಅವರನ್ನು ಬಾಗಲಕೋಟೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಇದಲ್ಲದೆ, ಬಿಡಿಎ ಆಯುಕ್ತ ಮೇಜರ್‌ ಮಣಿವಣ್ಣನ್‌ ಪಿ. ಅವರಿಗೆ ನಗರ ಭೂ ಸಾರಿಗೆ ನಿರ್ದೇಶನಾಲಯದ ಆಯುಕ್ತರ ಹೆಚ್ಚುವರಿ ಪ್ರಭಾರ ವಹಿಸಲಾಗಿದೆ. ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ. ರಾಮ್‌ ಪ್ರಸಾತ್‌ ಮನೋಹರ್‌ ವಿ. ಅವರಿಗೆ ಪ್ರವಾಸೋದ್ಯಮ ಇಲಾಖೆಯ ಆಯುಕ್ತರ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಈ ಆಡಳಿತಾತ್ಮಕ ಬದಲಾವಣೆಗಳು ರಾಜ್ಯದ ವಿವಿಧ ಇಲಾಖೆಗಳ ಕಾರ್ಯಕ್ಷಮತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

Related News

error: Content is protected !!