ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ ಸುದ್ದಿಯಾಗಿದ್ದ ರೌಡಿಶೀಟರ್ ಮಂಜುನಾಥ ಅಲಿಯಾಸ್ ‘ಮಚ್ ಮಂಜ’ನನ್ನು ಹಳಿಯಾಳ ಪೊಲೀಸರು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ತಾಸಗಾಂ ಪ್ರದೇಶದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಇತ್ತೀಚೆಗೆ ಮೌರ್ಯ ಹೋಟೆಲ್ ಎದುರಿನ ಪಾನ್ ಶಾಪ್ ಬಳಿ ಸಾರ್ವಜನಿಕರಿಗೆ ಉಪದ್ರವ ನೀಡಿದ್ದ ಮಂಜುನಾಥ, ಸ್ಥಳಕ್ಕೆ ಆಗಮಿಸಿದ್ದ ಪೊಲೀಸರೊಂದಿಗೆ ವಾಗ್ವಾದ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಎನ್ನಲಾಗಿದೆ. ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದ್ದವು. ಘಟನೆ ನಂತರ ಪೊಲೀಸ್ ಇಲಾಖೆಯ ಕಾರ್ಯವೈಖರಿಯ ಬಗ್ಗೆಯೂ ವ್ಯಾಪಕ ಚರ್ಚೆ ನಡೆದಿದ್ದು, ಇಲಾಖಾ ಮಟ್ಟದಲ್ಲಿಯೂ ಕ್ರಮ ಕೈಗೊಳ್ಳಲಾಗಿತ್ತು.
ಈ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಗುನ್ನಾ ಸಂಖ್ಯೆ 161/2026 ಹಾಗೂ 162/2026ರಡಿ ಪ್ರಕರಣ ದಾಖಲಾಗಿತ್ತು. ಸಾರ್ವಜನಿಕರಿಗೆ ತೊಂದರೆ ನೀಡುವುದು, ಹಲ್ಲೆ ನಡೆಸುವುದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಹಾಗೂ ಜೀವ ಬೆದರಿಕೆ ಹಾಕಿದ ಆರೋಪಗಳಡಿ ತನಿಖೆ ಆರಂಭಿಸಲಾಗಿತ್ತು.
ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿತ ತಲೆಮರೆಸಿಕೊಂಡಿದ್ದ. ಮೊಬೈಲ್ ಸೇರಿದಂತೆ ಯಾವುದೇ ತಾಂತ್ರಿಕ ಸುಳಿವು ಲಭ್ಯವಾಗದ ಹಿನ್ನೆಲೆಯಲ್ಲಿ ಆರೋಪಿಯ ಪತ್ತೆ ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಅವರ ನಿರ್ದೇಶನದಂತೆ ಆರೋಪಿಯ ಬಂಧನಕ್ಕಾಗಿ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿತ್ತು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಹಾಗೂ ದಾಂಡೇಲಿ ಉಪವಿಭಾಗದ ಡಿವೈಎಸ್ಪಿ ಶಿವಾನಂದ ಮದರಖಂಡಿ ಅವರ ಮಾರ್ಗದರ್ಶನದಲ್ಲಿ, ಹಳಿಯಾಳ ಸಿಪಿಐ ಜೈಪಾಲ್ ಪಾಟೀಲ್ ನೇತೃತ್ವದ ತಂಡ ನಿರಂತರ ಕಾರ್ಯಾಚರಣೆ ನಡೆಸಿತು. ತಾಂತ್ರಿಕ ಮಾಹಿತಿ ಹಾಗೂ ಖಚಿತ ಸುಳಿವಿನ ಆಧಾರದ ಮೇಲೆ ಮಹಾರಾಷ್ಟ್ರದ ತಾಸಗಾಂ ಪ್ರದೇಶದಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಯಿತು.
ಬಳಿಕ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಆರೋಪಿಯನ್ನು ಹಳಿಯಾಳಕ್ಕೆ ಕರೆತರಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರೋಪಿತನ ವಿರುದ್ಧ ಈಗಾಗಲೇ ರೌಡಿಶೀಟರ್ ದಾಖಲೆ ಇದ್ದು, ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ಜನರ ಸುರಕ್ಷತೆಗೆ ಧಕ್ಕೆ ಉಂಟುಮಾಡುವ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಮುಂದೆಯೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
